PLEASE LOGIN TO KANNADANET.COM FOR REGULAR NEWS-UPDATES


 ಗೌರಿ-ಗಣೇಶ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸುವ ಮೂಲಕ ದೇವರಿಗೆ ಭಕ್ತಿ-ಭಾವ ಸಮರ್ಪಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ಸಾರ್ವಜನಿಕರಿಗೆ ಮನವಿ ಮಾಡಿದರು.
  ಇದೇ ಆ. ೨೯ ರಿಂದ ಸೆ. ೧೩ ರವರೆಗೆ ಗೌರಿ-ಗಣೇಶ ಹಬ್ಬದ ಆಚರಣೆ ಕುರಿತು ಜಿಲ್ಲಾ ಆಡಳಿತ ಭವನದ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಶಾಂತಿಪಾಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
  ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಜಿಲ್ಲೆಯಲ್ಲಿ ಗೌರಿ-ಗಣೇಶ ಹಬ್ಬವನ್ನು ಶಾಂತಿ ಹಾಗೂ ಸೌಹಾರ್ದತೆಯಿಂದ ಆಚರಿಸಬೇಕು.  ಗಣೇಶ ಮೂರ್ತಿಗಳನ್ನು ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಕೂರಿಸಬೇಕು.  ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಕೂರಿಸುವ ಸಂಘಟಕರು ನಗರಸಭೆ, ಜೆಸ್ಕಾಂ ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು,  ಈ ಎಲ್ಲ ಸೌಲಭ್ಯಗಳನ್ನು ಪಡೆದುಕೊಳ್ಳಲು ಏಕ-ಗವಾಕ್ಷಿ ಯೋಜನೆಯಲ್ಲಿ ಆಯಾ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿಯೇ ಅನುಮತಿ ನೀಡಲು ಕ್ರಮ ಕೈಗೊಳ್ಳಲಾಗುವುದು.  ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆದುಕೊಳ್ಳುವುದು, ಮೈಕ್ ಬಳಸುವುದನ್ನು ನಿಷೇಧಿಸಲಾಗಿದೆ.  ವಿದ್ಯುತ್ ಸಂಪರ್ಕ ವ್ಯತ್ಯಯ ಉಂಟಾಗದಂತೆ ನೋಡಿಕೊಳ್ಳಲು ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.   ಹಬ್ಬವನ್ನು ಪರಿಸರ ಸ್ನೇಹಿಯನ್ನಾಗಿಸಲು ಮಣ್ಣಿನಿಂದ ಮಾಡಿದ ಗಣಪತಿ ಮೂರ್ತಿಯನ್ನು ಸಾರ್ವಜನಿಕರು ಬಳಸುವುದು ಸೂಕ್ತ.   ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡದೆ, ಶಾಂತಿ ಹಾಗೂ ಸೌಹಾರ್ದತೆಯಿಂದ ಗೌರಿ-ಗಣೇಶ ಹಬ್ಬ ಆಚರಿಸುವಲ್ಲಿ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ಸಾರ್ವಜನಿಕರಲ್ಲಿ ಕಳಕಳಿಯ ಮನವಿ ಮಾಡಿಕೊಂಡರು.
  ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಟಿ.ಡಿ. ಪವಾರ್ ಅವರು ಮಾತನಾಡಿ,  ಭಕ್ತಿ-ಭಾವದಿಂದ ಹಾಗೂ ಸಂಭ್ರಮದಿಂದ ಗೌರಿ-ಗಣೇಶ ಹಬ್ಬ ಆಚರಿಸಬೇಕಾಗಿದ್ದು, ಆದರೆ, ಗಣಪತಿ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ  ಸಾರ್ವಜನಿಕರು ಸಭ್ಯತೆಯ ಎಲ್ಲೆಯನ್ನು ಮೀರಬಾರದು, ಇಂತಹ ವರ್ತನೆ ಭಕ್ತಿ-ಭಾವದ ಕಾರ್ಯಕ್ರಮಕ್ಕೆ ಶೋಭೆ ತರುವುದಿಲ್ಲ.  ಆಸ್ಪತ್ರೆಗಳು ಹಾಗೂ ಧಾರ್ಮಿಕ ಕೇಂದ್ರಗಳ ಎದುರುಗಡೆ ಪಟಾಕಿ ಹಚ್ಚುವುದನ್ನು ಅಲ್ಲದೆ ಭಾರಿ ಶಬ್ದ ಬರುವ ಪಟಾಕಿ ಬಳಕೆಯನ್ನು ನಿಷೇಧಿಸಲಾಗಿದೆ. ಪೆಂಡಾಲ್ ಹಾಗೂ ಗಣೇಶ ಮೂರ್ತಿಗಳ ರಕ್ಷಣೆಗಾಗಿ ಆಯಾ ಸಂಘಟಕರು ಸ್ವಯಂ-ಸೇವಕರನ್ನು ನೇಮಿಸಿಕೊಳ್ಳಬೇಕು.  ಮನರಂಜನಾ ಕಾರ್ಯಕ್ರಮಗಳು ನಡೆಯುವ ಅವಧಿ ಹಾಗೂ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆಯ ಮಾರ್ಗವನ್ನು ಸಾಕಷ್ಟು ಮುಂಚಿತವಾಗಿ ಪೊಲೀಸ್ ಇಲಾಖೆಗೆ ಮಾಹಿತಿ ಒದಗಿಸಬೇಕು.  ಪೆಂಡಾಲ್ ನಿರ್ಮಿಸುವಾಗ ಸಾರ್ವಜನಿಕರಿಗೆ ಹಾಗೂ ವಾಹನಗಳ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು.  ಅಗ್ನಿ ಅವಘಡಗಳನ್ನು ತಪ್ಪಿಸಲು ಅಗತ್ಯ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ವಹಿಸಿ, ಅಗತ್ಯ ಸಾಮಗ್ರಿಗಳನ್ನು ಇಟ್ಟುಕೊಳ್ಳಬೇಕು.  ಅಸುರಕ್ಷಿತ ವಿದ್ಯುತ್ ಸಂಪರ್ಕ ಪಡೆದಲ್ಲಿ, ಅಗ್ನಿ ಅನಾಹುತ ಸಂಭವಿಸುವ ಸಾಧ್ಯತೆ ಇರುವುದರಿಂದ, ಜೆಸ್ಕಾಂನವರ ಅನುಮತಿ ಪಡೆದು, ಸುರಕ್ಷಿತ ವಿದ್ಯುತ್ ಸಂಪರ್ಕ ಪಡೆದುಕೊಳ್ಳಬೇಕು.  ಸಾರ್ವಜನಿಕ ತೊಂದರೆ ಹಾಗೂ ಅನಾಹುತ ತಪ್ಪಿಸುವ ನಿಟ್ಟಿನಲ್ಲಿ ಪಟಾಕಿ ಬಳಕೆ ಮಾಡಲು, ಸಂಘಟಕರು ಮೆರವಣಿಗೆ ಸಂದರ್ಭದಲ್ಲಿ ಜವಾಬ್ದಾರಿಯುತ ವ್ಯಕ್ತಿಗಳಿಗೆ ವಹಿಸಬೇಕು. ಕೋಮು ಪ್ರಚೋದನೆ ಮಾಡುವವರು, ಅನಗತ್ಯ ಗಲಾಟೆ ಮಾಡುವವರು, ಗೂಂಡಾ ಪಟ್ಟಿಯಲ್ಲಿರುವವರ ಬಗ್ಗೆ ಪೊಲೀಸ್ ಇಲಾಖೆ ತೀವ್ರ ನಿಗಾ ವಹಿಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳಲಿದೆ. ಒಟ್ಟಾರೆಯಾಗಿ ಹಬ್ಬ ಶಾಂತಿಯುತವಾಗಿ ನಡೆಸಲು ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
  ಸಭೆಯಲ್ಲಿ ಭಾಗವಹಿಸಿದ್ದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ರುದ್ರೇಶ್ ಅವರು ಮಾತನಾಡಿ, ಸಾರ್ವಜನಿಕರು ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯನ್ನಾಗಿ ಆಚರಿಸಬೇಕು, ಪರಿಸರ ಮತ್ತು ಜಲ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾಧ್ಯವಾದಷ್ಟು ಪರಿಸರ ಸ್ನೇಹಿ ಗಣೇಶ ಮೂರ್ತಿ ಸ್ಥಾಪಿಸುವಂತೆ ಕರೆ ನೀಡಿದರು.
  ಸಭೆಯಲ್ಲಿ ಉಪವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ್, ಡಿವೈಎಸ್‌ಪಿ ರಾಜೀವ್ ಎಂ., ಸೇರಿದಂತೆ ವಿವಿಧ ತಾಲೂಕುಗಳ ಪೊಲೀಸ್ ಇಲಾಖೆಯ ಅಧಿಕಾರಿಗಳು, ತಾಲೂಕು ತಹಸಿಲ್ದಾರರು, ನಗರಸಭೆ, ಪುರಸಭೆಗಳ ಮುಖ್ಯಾಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಶಿವಾನಂದ ಹೊದ್ಲೂರು, ಸಿದ್ದಪ್ಪ ಹಂಚಿನಾಳ, ಮಾನ್ವಿ ಪಾಷಾ, ವಿವಿಧ ಗಣೇಶ ಉತ್ಸವ ಸಮಿತಿಯ ಪದಾಧಿಕಾರಿಗಳು, ಗಣ್ಯರು, ಸಾರ್ವಜನಿಕರು ಭಾಗವಹಿಸಿದ್ದರು.

Advertisement

0 comments:

Post a Comment

 
Top