PLEASE LOGIN TO KANNADANET.COM FOR REGULAR NEWS-UPDATES

 ಹಿಂದುಳಿದ ಮತ್ತು ಶೋಷಿತ ವರ್ಗದವರ ಧ್ವನಿಯಾಗಿ ಅವರನ್ನು ಮುಖ್ಯವಾಹಿನಿಗೆ ತರಲು ದಿಟ್ಟ ನಿರ್ಧಾರ ಕೈಗೊಳ್ಳುತ್ತಿದ್ದ ದಿವಂಗತ ಡಿ. ದೇವರಾಜ ಅರಸು ಅವರು ದುರ್ಬಲ ವರ್ಗದವರ ಆಶಾಕಿರಣವಾಗಿದ್ದರು ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ಹೇಳಿದರು.
  ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಡಿ. ದೇವರಾಜ ಅರಸು ಅವರ ೯೯ ನೇ ಜನ್ಮದಿನಾಚರಣೆ ಸಮಾರಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
  ದೇವರಾಜ ಅರಸು ಅವರು ಮೂಲತಃ ಕೃಷಿಕ ಕುಟುಂಬದಿಂದ ಬಂದವರು, ಶ್ರೇಷ್ಠ ಕುಸ್ತಿಪಟುವಾಗಿ ರೂಪುಗೊಂಡ ಅವರು ಮಾನಸಿಕ ಮತ್ತು ಶಾರೀರಿಕ ಸಾಮರ್ಥ್ಯ ಗಳಿಸುವ ಮೂಲಕ ರಾಜಕೀಯದಲ್ಲೂ ಶ್ರೇಷ್ಠತೆಯನ್ನು ಗಳಿಸಿದರು,  ಉಳುವವನ ಸಂಕಷ್ಟವನ್ನು, ಪರಿಹರಿಸಲು, ಬಹು ಸಂಖ್ಯಾತರ ವಿರೋಧವನ್ನೂ ಲೆಕ್ಕಿಸದೆ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳುವುದರ ಮೂಲಕ  ಉಳುವವನೇ ಭೂಮಿಯ ಒಡೆಯ ಆಗುವಂತಹ ಭೂ-ಸುಧಾರಣೆ ಕಾನೂನನ್ನು ಜಾರಿಗೆ ತಂದರು.  ಈ ಮೂಲಕ ಹಿಂದುಳಿದ ಹಾಗೂ ಶೋಷಿತ ಸಮುದಾಯದವರು ನೆಮ್ಮದಿಯ ಜೀವನ ನಡೆಸಲು ಕಾರಣೀಭೂತರಾಗಿದ್ದಾರೆ. ಹಿಂದುಳಿದ ವರ್ಗಗಳು, ದುರ್ಬಲರಿಗೆ ರಾಜಕೀಯ ಹಕ್ಕಿನ ನೆಲೆಯನ್ನು ಒದಗಿಸಿ, ಉನ್ನತ ಸ್ಥಾನಮಾನ ಹಾಗೂ ರಾಜಕೀಯ ಜಾಗೃತಿ ಮೂಡಿಸಿದಂಹ ಮಹಾನ್ ವ್ಯಕ್ತಿ ಅರಸು ಅವರು.  ಹಿಂದುಳಿದ ವರ್ಗದವರ ಕಲ್ಯಾಣಕ್ಕಾಗಿ ಹಾಗೂ ಗ್ರಾಮೀಣ ಭಾಗದಲ್ಲಿ ಬಡ ಕೂಲಿಕಾರ್ಮಿಕರ ಬದುಕನ್ನು ಹಸನಾಗಿಸಲು ಅವರು ಹಾಕಿಕೊಟ್ಟಂತಹ ಯೋಜನೆಗಳು ಇಂದಿಗೂ ಜನಮಾನಸದಲ್ಲಿ ಉಳಿಯುವಂತಹದು.  ರಾಜಕೀಯ ಮತ್ತು ಆಡಳಿತ ವ್ಯವಸ್ಥೆಯ ಕ್ಷೇತ್ರದಲ್ಲಿ ದೇವರಾಜ ಅರಸು ಅವರದು ಅಚ್ಚಳಿಯದ ಹೆಸರಾಗಿದೆ.  ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕು ಹಸನಾಗಿಸಲು ಹಾಸ್ಟೆಲ್‌ಗಳನ್ನು ಸ್ಥಾಪಿಸುವ ಪರಿಕಲ್ಪನೆಯನ್ನು ಅನುಷ್ಠಾನಕ್ಕೆ ತಂದರು.  ಜೀತ ಪದ್ಧತಿ, ಮಲ ಹೊರುವ ಪದ್ಧತಿಯನ್ನು ನಿಷೇಧಿಸುವ ಮೂಲಕ ಶೋಷಿತರ ಧ್ವನಿಯಾದರು.  ಜನರ ಬೇಡಿಕೆ ಹಾಗೂ ಕುಂದುಕೊರತೆಗಳಿಗೆ ಸ್ಪಂದಿಸುವವನೇ ನಿಜವಾದ ರಾಜಕಾರಣಿ, ಈ ದಿಸೆಯಲ್ಲಿ ದೇವರಾಜ ಅರಸು ಅವರು ಎಲ್ಲ ರಾಜಕಾರಣಿಗಳಿಗೂ ಆದರ್ಶಪ್ರಾಯ.  ಅರಸು ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಹಿಂದುಳಿದ ವರ್ಗಗಳು, ಪ.ಜಾತಿ, ಪ.ವರ್ಗ ಸೇರಿದಂತೆ ಎಲ್ಲ ದುರ್ಬಲ ವರ್ಗಗಳ ಸ್ಥಿತಿಗತಿಗಳನ್ನು ಅರಿತು ಎಲ್.ಜಿ. ಹಾವನೂರು ಅವರ ವರದಿಯನ್ನು ಯಥಾವತ್ತಾಗಿ ಜಾರಿಗೆ ತಂದು, ದುರ್ಬಲವರ್ಗದವರಿಗೆ ಮೀಸಲಾತಿ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದರು. ಈ ಮೂಲಕ ಹಿಂದುಳಿದ ವರ್ಗದವರರನ್ನು ಮುಖ್ಯ ವಾಹಿನಿಗೆ ಸೇರಿಸುವಂತಹ ಮಹತ್ವದ ಕಾರ್ಯವನ್ನು ಅರಸು ಅವರು ಕೈಗೊಂಡರು ಎಂದು ಸಂಸದ ಸಂಗಣ್ಣ ಕರಡಿ ಅವರು ಹೇಳಿದರು.
  ದೇವರಾಜ ಅರಸು ಅವರ ಕುರಿತು ಹಿರಿಯ ಸಾಹಿತಿ ವಿಠ್ಠಪ್ಪ ಗೋರಂಟ್ಲಿ ಅವರು ವಿಶೇಷ ಉಪನ್ಯಾಸ ನೀಡಿ, ರಾಜ್ಯದ ಎಂಟನೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ದೇವರಾಜ ಅರಸು ಅವರು, ಜಮೀನ್ದಾರಿಕೆ ಪದ್ಧತಿಯನ್ನು ಕೊನೆಗಾಣಿಸಿ, ಶ್ರಮಜೀವಿ ರೈತನಿಗೇ ಭೂಮಿಯ ಒಡೆಯನಾಗುವಂತೆ, ಯಾವುದೇ ಸರ್ಕಾರ ಕೈಗೊಳ್ಳದ ಐತಿಹಾಸಿಕ ತೀರ್ಮಾನವನ್ನು ಕೈಗೊಂಡರು.  ಅನೇಕ ಅಡೆ-ತಡೆಗಳನ್ನು ಲೆಕ್ಕಿಸದೆ ಕನ್ನಡಿಗರ ಭಾವನೆಯನ್ನು ಅರ್ಥ ಮಾಡಿಕೊಂಡು, ೧೯೭೩ ರಲ್ಲಿ ಮೈಸೂರು ರಾಜ್ಯವನ್ನು ಕರ್ನಾಟಕ ರಾಜ್ಯವೆಂದು ನಾಮಕರಣ ಮಾಡುವ ದಿಟ್ಟ ನಿರ್ಧಾರವನ್ನು ಅರಸು ಅವರು ಕೈಗೊಂಡರು ಎಂದರು.
   ಜಿಲ್ಲಾ ಪಂಚಾಯತಿ ಅಧ್ಯಕ್ಷ ಅಮರೇಶ್ ಕುಳಗಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.  ಜಿಲ್ಲಾಧಿಕಾರಿ ಆರ್.ಆರ್. ಜನ್ನು, ಜಿ.ಪಂ. ಸದಸ್ಯ ಅಶೋಕ್ ತೋಟದ, ನಗರಸಭೆ ಅಧ್ಯಕ್ಷೆ ಲತಾ ವೀರಣ್ಣ ಸಂಡೂರ, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಡಿ. ಪವಾರ್, ತಾ.ಪಂ. ಉಪಾಧ್ಯಕ್ಷೆ ಮುದ್ದಮ್ಮ ಕರಡಿ, ನಗರಸಭೆ ಉಪಾಧ್ಯಕ್ಷ ಅಮ್ಜದ್ ಪಟೇಲ್, ನಗರಸಭೆ ಸದಸ್ಯೆ ರೇಣುಕಾ ಪೂಜಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಧಿಕಾರಿ ಕಲ್ಲೇಶ್ ಅವರು ಸ್ವಾಗತಿಸಿದರು.  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕೊಟ್ರಪ್ಪ ಚೋರನೂರ ಪ್ರಾಸ್ತಾವಿಕ ಭಾಷಣ ಮಾಡಿದರು.    ಇದೇ ಸಂದರ್ಭದಲ್ಲಿ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಇಲಾಖೆಯ ವಸತಿ ನಿಲಯ, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಎಸ್.ಎಸ್.ಎಲ್.ಸಿ. ಹಾಗೂ ಪಿ.ಯು.ಸಿ. ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.    
  ಸಮಾರಂಭಕ್ಕೂ ಮುನ್ನ ಡಿ. ದೇವರಾಜ ಅರಸು ಅವರ ಭಾವಚಿತ್ರದೊಂದಿಗೆ ಶ್ರೀ ಗವಿಸಿದ್ದೇಶ್ವರ ಕ್ರೀಡಾಂಗಣದಿಂದ ಜವಾಹರ ರಸ್ತೆ ಮೂಲಕ ಸಾಹಿತ್ಯ ಭವನದವರೆಗೆ ಭವ್ಯ ಮೆರವಣಿಗೆ ಏರ್ಪಡಿಸಲಾಗಿತ್ತು.

Advertisement

0 comments:

Post a Comment

 
Top