ಜನತಾದರ್ಶನದಲ್ಲಿ ಅಹವಾಲು ಸ್ವೀಕಾರ-
ಕೊಪ್ಪಳ ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ್ ಎಸ್ ತಂಗಡಗಿ ಅವರು ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಶನಿವಾರ ಇದೇ ಮೊದಲ ಬಾರಿಗೆ ಏರ್ಪಡಿಸಲಾಗಿದ್ದ ಜನತಾದರ್ಶನ ಕಾರ್ಯಕ್ರಮದಲ್ಲಿ ನೂರಾರು ಸಾರ್ವಜನಿಕರು ತಮ್ಮ ಕುಂದುಕೊರತೆ, ಅಹವಾಲುಗಳನ್ನು ಸಲ್ಲಿಸಿದರು.
ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ ಸಚಿವರು, ಸ್ಥಳದಲ್ಲಿಯೇ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು, ಅರ್ಜಿಗಳಿಗೆ ಸಂಬಂಧಪಟ್ಟಂತೆ ಕೂಡಲೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆಯನ್ನು ನೀಡಿದರು. ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, ಜನತಾದರ್ಶನ ಸಂದರ್ಭದಲ್ಲಿ ಅರ್ಜಿ ಸಲ್ಲಿಕೆಗೆ ಸಂಬಂಧಪಟ್ಟಂತೆ, 15 ದಿನಗಳ ಒಳಗಾಗಿ ಪರಿಹಾರ ಕಲ್ಪಿಸಲಾಗುವುದು. ಅರ್ಜಿಯಲ್ಲಿನ ವಿಷಯಗಳು ನ್ಯಾಯಾಲಯದ ವ್ಯಾಪ್ತಿಯಲ್ಲಿದ್ದಲ್ಲಿ, ಅಂತಹ ಅರ್ಜಿಗಳನ್ನು ಸೂಕ್ತವಾಗಿ ಪರಿಶೀಲಿಸಿ, ಕ್ರಮ ಕೈಗೊಳ್ಳಲಾಗುವುದು. ವಿವಿಧ ಅಭಿವೃದ್ಧಿ ನಿಗಮಗಳಿಂದ ಫಲಾನುಭವಿಗಳ ಆಯ್ಕೆಯನ್ನು ಆಯಾ ವಿಧಾನಸಭಾ ಕ್ಷೇತ್ರಗಳ ಶಾಸಕರೆ ಕೈಗೊಳ್ಳುವುದರಿಂದ, ಇದಕ್ಕೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಶಾಸಕರು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರ ಗಮನಕ್ಕೆ ತರಲಾಗುವುದು. ಇನ್ನು ಮುಂದೆ ಪ್ರತಿ ತಿಂಗಳ ಮೊದಲ ಶನಿವಾರದಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಜನತಾದರ್ಶನ ಕಾರ್ಯಕ್ರಮ ಹಮ್ಮಿಕೊಂಡು, ಸಾರ್ವಜನಿಕರ ಕುಂದುಕೊರತೆ ಅರ್ಜಿಗಳನ್ನು ಸ್ವೀಕರಿಸಿ, ಪರಿಹಾರ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಅಲ್ಲದೆ ಸಾಮಾನ್ಯ ಜನರ ಅನುಕೂಲಕ್ಕಾಗಿ ಆಯಾ ತಾಲೂಕು ಮಟ್ಟದಲ್ಲಿಯು ಜನಸಂಪರ್ಕ ಸಭೆ ಹಾಗೂ ಪ್ರಗತಿ ಪರಿಶೀಲನಾ ಸಭೆಯನ್ನು ಪ್ರತಿ ತಿಂಗಳು ಆಯಾ ತಾಲೂಕು ಕೇಂದ್ರಗಳಲ್ಲಿ ಆಯೋಜಿಸಲಾಗುವುದು. ಇದೇ ಸೆ. 15 ರಂದು ಕುಷ್ಟಗಿಯಲ್ಲಿ ಜನಸಂಪರ್ಕ ಕಾರ್ಯಕ್ರಮ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್ ತಂಗಡಗಿ ಅವರು ಹೇಳಿದರು.
ಕುಷ್ಟಗಿ ತಾಲೂಕಿನ ವ್ಯಕ್ತಿಯೋರ್ವರ ಮಗುವಿನ ಮೆದುಳು ಬೆಳವಣಿಗೆ ಸಮರ್ಪಕವಾಗಿ ಆಗದ ಕಾರಣ, ಮಗುವಿನ ಆರೋಗ್ಯಕ್ಕಾಗಿ ಪ್ರತಿ ತಿಂಗಳು ಸುಮಾರು 6 ರಿಂದ 8 ಸಾವಿರ ರೂ. ಖರ್ಚು ಮಾಡುತ್ತಿದ್ದು, ಆರ್ಥಿಕ ಸಂಕಷ್ಟದಲ್ಲಿದ್ದೇನೆ ಎಂಬುದಾಗಿ ಆತ ಸಚಿವರಿಗೆ ಮನವಿ ಸಲ್ಲಿಸಿದರು. ಇದಕ್ಕೆ ಸ್ಪಂದಿಸಿದ ಸಚಿವರು, ಕೂಡಲೆ ಮಗುವಿನ ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ ವಯಕ್ತಿಕವಾಗಿ ಸಚಿವರು ಆ ಕುಟುಂಬಕ್ಕೆ ಧನ ಸಹಾಯವನ್ನೂ ಸಹ ಮಾಡಿದರು. ಕುಷ್ಟಗಿ ತಾಲೂಕು ದ್ಯಾಂಪುರ ಗ್ರಾಮದಲ್ಲಿ ದೌರ್ಜನ್ಯಕ್ಕೆ ಒಳಗಾದ ಕುಟುಂಬಕ್ಕೆ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ದೌರ್ಜನ್ಯ ಪರಿಹಾರ ಯೋಜನೆಯಡಿ 3. 50 ಲಕ್ಷ ರೂ. ಗಳ ಪರಿಹಾರ ಚೆಕ್ ಅನ್ನು ದ್ಯಾಮವ್ವ ಎಂಬ ಮಹಿಳೆಗೆ ವಿತರಿಸಿದರು.
ಜಿಲ್ಲಾ ಪಂಚಾಯತಿ ಅಧ್ಯಕ್ಷ ಅಮರೇಶ್ ಕುಳಗಿ, ಜಿಲ್ಲಾಧಿಕಾರಿ ಆರ್.ಆರ್. ಜನ್ನು, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ, ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್, ಭಾಗ್ಯನಗರ ಗ್ರಾ.ಪಂ. ಅಧ್ಯಕ್ಷ ಹೊನ್ನೂರಸಾಬ್, ಜಿ.ಪಂ. ಸದಸ್ಯ ಜನಾರ್ಧನ ಹುಲಿಗಿ, ಮಾಜಿ ಶಾಸಕ ಬಸವರಾಜ ಹಿಟ್ನಾಳ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
0 comments:
Post a Comment