PLEASE LOGIN TO KANNADANET.COM FOR REGULAR NEWS-UPDATES

 ಶಾಲಾ, ಕಾಲೇಜುಗಳ ಸುತ್ತ ಮುತ್ತ ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಮಾರಾಟವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸುವಂತೆ ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
  ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆ ಅನುಷ್ಠಾನ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
  ಶಾಲಾ, ಕಾಲೇಜುಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಮಾರಾಟವನ್ನು ಈಗಾಗಲೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.  ಆದರೆ ಈಗಲೂ ಜಿಲ್ಲೆಯಲ್ಲಿನ ಶಾಲಾ, ಕಾಲೇಜುಗಳ ಕಾಂಪೌಂಡುಗಳಿಗೆ ಹೊಂದಿಕೊಂಡಂತೆ ಇರುವ ಸಣ್ಣ, ಪುಟ್ಟ ಅಂಗಡಿಗಳಲ್ಲಿ ಸಿಗರೇಟು ಮತ್ತು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ.  ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳು, ತಾವು ಭೇಟಿ ನೀಡಿದ, ಶಾಲಾ, ಕಾಲೇಜುಗಳ ಬಳಿ ಕಾಯ್ದೆಯ ಉಲ್ಲಂಘನೆ ಆಗುತ್ತಿರುವ ಬಗ್ಗೆ ಸಮರ್ಪಕವಾಗಿ ಪರಿಶೀಲಿಸುತ್ತಿಲ್ಲ.  ಒಂದು ವೇಳೆ ಈ ಬಗ್ಗೆ ಪರಿಶೀಲನೆ ನಡೆಸಿದ್ದಲ್ಲಿ, ಎಷ್ಟು ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.  ಅಥವಾ ಸಂಬಂಧಪಟ್ಟ ಶಾಲಾ-ಕಾಲೇಜುಗಳ ಮುಖ್ಯಸ್ಥರಿಗೆ ನೋಟೀಸ್ ನೀಡಲಾಗಿದೆ ಎನ್ನುವ ವಿವರ ನೀಡಬೇಕು.   ಕಾಯ್ದೆಯನ್ವಯ 18 ವರ್ಷಕ್ಕಿಂತ  ಕಡಿಮೆ ವಯಸ್ಸಿನವರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವಂತಿಲ್ಲ.  ಆದರೂ ಈ ಕುರಿತು ಕಾಯ್ದೆಯ ಅನುಷ್ಠಾನ ಸಮರ್ಪಕವಾಗಿ ಆಗುತ್ತಿಲ್ಲ.  ತಂಬಾಕು ಉತ್ಪನ್ನಗಳ ಮಾರಾಟದ ಜಾಹೀರಾತುಗಳಲ್ಲಿ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ದೊಡ್ಡ ಅಕ್ಷರಗಳಲ್ಲಿ ಸೂಚನೆ ನೀಡುವ ಬಗ್ಗೆ ಪ್ರದರ್ಶನ ಮಾಡುವುದನ್ನು ಸರಿಯಾಗಿ ಪಾಲಿಸುತ್ತಿಲ್ಲ.  ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳು ತಮ್ಮ ವ್ಯಾಪ್ತಿಯಲ್ಲಿ ಆರೋಗ್ಯ ನಿರೀಕ್ಷಕರು ಸಮರ್ಪಕ ಕಾರ್ಯ ನಿರ್ವಹಿಸುತ್ತಿಲ್ಲ.  ಅಂಗಡಿಗಳಲ್ಲಿ ನಿಯಮಿತವಾಗಿ ಪರಿಶೀಲಿಸಿ, ಕಾಯ್ದೆ ಉಲ್ಲಂಘನೆ ಮಾಡುವವರ ಪರವಾನಗಿ ರದ್ದುಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.  ಈ ಕುರಿತಂತೆ ನಗರ, ಸ್ಥಳೀಯ ಸಂಸ್ಥೆಯ ಅಧಿಕಾರಿಗಳಿಗೆ ತಾಲೂಕು ಮಟ್ಟದಲ್ಲಿ ತರಬೇತಿ ನೀಡಲು ಅಗತ್ಯ ಕ್ರಮ ಜರುಗಿಸಬೇಕು ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಿಗೆ ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಸೂಚನೆ ನೀಡಿದರು. 
  ಸಭೆಯಲ್ಲಿ ಉಪಸ್ಥಿತರಿದ್ದ ಡಿವೈಎಸ್‍ಪಿ ರಾಜೀವ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಬೀಡಿ, ಸಿಗರೇಟ್ ಸೇವನೆ ಮಾಡುವವರಿಗೆ 50 ರೂ.ಗಳಿಂದ 200 ರೂ.ಗಳ ವರೆಗೆ ದಂಡ ವಿಧಿಸಲು ಕಾಯ್ದೆಯಲ್ಲಿ ಅವಕಾಶವಿದೆ.  ಜಿಲ್ಲೆಯಲ್ಲಿ ಈ ವರ್ಷ ಇದುವರೆಗೂ ಇಂತಹ 2712 ಪ್ರಕರಣಗಳನ್ನು ದಾಖಲಿಸಿ, 2. 80 ಲಕ್ಷ ರೂ. ಗಳ ದಂಡವನ್ನು ವಸೂಲು ಮಾಡಲಾಗಿದೆ.  ಮುಂದಿನ ದಿನಗಳಲ್ಲಿ ಇನ್ನಷ್ಟು ಬಿಗಿ ಕ್ರಮ ಅನುಸರಿಸಲು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.
  ಸಭೆಯಲ್ಲಿ ಡಿಡಿಪಿಐ ಶ್ಯಾಮಸುಂದರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶಂಕ್ರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

0 comments:

Post a Comment

 
Top