ಅತಿವೃಷ್ಠಿ ಬಾಧಿತರಿಗೆ ಸಮರ್ಪಕ ಪರಿಹಾರ ಒದಗಿಸಿ- ಸಂಗಣ್ಣ ಕರಡಿ
ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಗೆ ಮನೆ ಮತ್ತು ಬೆಳೆ ಹಾನಿ ಅನುಭವಿಸಿದವರಿಗೆ ಸಮರ್ಪಕ ಪರಿಹಾರ ಒದಗಿಸುವಂತೆ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಕೇಂದ್ರ ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಸೋಮವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಇತ್ತೀಚೆಗೆ ಭಾರಿ ಮಳೆ ಸುರಿದಿದ್ದು, ಬೆಳೆ ಮತ್ತು ಮನೆ ಹಾನಿ ಅನುಭವಿಸಿದವರಿಗೆ ಸೂಕ್ತ ಪರಿಹಾರ ಕಲ್ಪಿಸಬೇಕು. ಕಚ್ಚಾ ಮತ್ತು ಪಕ್ಕಾ ಮನೆಗಳನ್ನು ಗುರುತಿಸುವ ಸಂಬಂಧ ಸರ್ಕಾರ ಇತ್ತೀಚೆಗೆ ಹೊಸ ಮಾರ್ಗಸೂಚಿಯನ್ನು ಹೊರಡಿಸಿದ್ದು, ಆದರೆ ಪರಿಹಾರವನ್ನು ಮಾತ್ರ ಹಳೆಯ ಮಾರ್ಗಸೂಚಿಯಂತೆ ವಿತರಿಸಲಾಗುತ್ತಿರುವುದಾಗಿ ತಿಳಿದುಬಂದಿದೆ. ಅಲ್ಲದೆ ಬೆಳೆ ಹಾನಿಗೆ ಸಂಬಂಧಿಸಿದಂತೆ ಬೀಳು ಬಿದ್ದ ಹೊಲಗಳಿಗೂ ಪರಿಹಾರ ಪಡೆದಿರುವ ಬಗ್ಗೆ ದೂರುಗಳು ಬಂದಿವೆ. ಅಧಿಕಾರಿಗಳು ಕ್ಷೇತ್ರಗಳಿಗೆ ಭೇಟಿ ನೀಡಿ, ಖುದ್ದು ಪರಿಶೀಲನೆ ನಡೆಸಿ ಪರಿಹಾರ ಪಡೆಯಲು ಅರ್ಹರಿರುವ ಫಲಾನುಭವಿಗಳನ್ನು ಗುರುತಿಸಬೇಕು. ಬೆಳೆ ಹಾನಿ ಕುರಿತಂತೆ ಸಮರ್ಪಕವಾಗಿ ಸಮೀಕ್ಷೆ ನಡೆಸಲು ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಂಸದ ಸಂಗಣ್ಣ ಕರಡಿ ಅವರು ಸೂಚನೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು, ಜಿಲ್ಲೆಯಲ್ಲಿ ಸದ್ಯ ೨೪೫೩ ಮನೆಗಳು ಅತಿವೃಷ್ಠಿಯಿಂದ ಹಾನಿಗೊಳಗಾಗಿದ್ದು, ಇದುವರೆಗೂ ೬೧. ೧೯ ಲಕ್ಷ ರೂ. ಗಳ ಪರಿಹಾರ ವಿತರಣೆ ಮಾಡಲಾಗಿದೆ. ಕಚ್ಚಾ ಮತ್ತು ಪಕ್ಕಾ ಮನೆ ವಿಂಗಡಣೆಯ ನೀತಿ ಪರಿಷ್ಕರಣೆ ಕುರಿತಂತೆ ಸರ್ಕಾರದ ಆದೇಶ ಇದುವರೆಗೂ ಬಂದಿಲ್ಲ. ಸದ್ಯ ಹಿಂದಿನ ಮಾರ್ಗಸೂಚಿಯಂತೆ ಪರಿಹಾರವನ್ನು ವಿತರಣೆ ಮಾಡಲಾಗುತ್ತಿದ್ದು, ಹೊಸ ಆದೇಶ ಬಂದ ನಂತರ, ಪರಿಶೀಲಿಸಿ, ಅರ್ಹ ಫಲಾನುಭವಿಗಳಿಗೆ ನೀಡಬೇಕಾದ ಬಾಕಿ ಪರಿಹಾರ ಮೊತ್ತವನ್ನು ಪಾವತಿಸಲು ಕ್ರಮ ಕೈಗೊಳ್ಳಲಾಗುವುದು. ಮನೆ ಅಥವಾ ಬೆಳೆ ಹಾನಿ ಪರಿಹಾರಕ್ಕೆ ಸಂಬಂಧಿಸಿದಂತೆ ತಪ್ಪು ಅಥವಾ ಸುಳ್ಳು ಮಾಹಿತಿ ನೀಡಿ ಪರಿಹಾರ ಪಡೆದಲ್ಲಿ ಅಥವಾ ಪಡೆಯಲು ಯತ್ನಿಸಿದಲ್ಲಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
’ಶುಚಿ’ ಅನುಷ್ಠಾನಕ್ಕೆ ಹಿಂದೇಟು : ಜಿಲ್ಲೆಯಲ್ಲಿ ೬ ರಿಂದ ೧೦ ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಹೆಣ್ಣು ಮಕ್ಕಳಿಗೆ ಹಾಗೂ ಗ್ರಾಮೀಣ ಪ್ರದೇಶಗಳ ಕಿಶೋರಿಯರಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್ ಪ್ಯಾಡ್ ವಿತರಣೆ ಮಾಡುವ ’ಶುಚಿ’ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ಈಗಾಗಲೆ ಎಲ್ಲ ಜಿಲ್ಲೆಗಳಲ್ಲಿ ಸಮರ್ಪಕವಾಗಿ ಅನುಷ್ಠಾನಗೊಂಡರೂ, ಕೊಪ್ಪಳ ಜಿಲ್ಲೆಯಲ್ಲಿ ಮಾತ್ರ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ, ಯೋಜನೆ ಅನುಷ್ಠಾನಗೊಂಡಿಲ್ಲ, ಹೆಣ್ಣುಮಕ್ಕಳಿಗೆ ವಿತರಣೆಗಾಗಿ ಪೂರೈಕೆ ಮಾಡಲಾಗಿರುವ ಪ್ಯಾಡ್‌ಗಳು ಇಲಿ, ಹೆಗ್ಗಣಗಳ ಪಾಲಾಗುತ್ತಿದೆ ಎಂಬುದಾಗಿ ಯಲಬುರ್ಗಾ ತಾ.ಪಂ. ಅಧ್ಯಕ್ಷೆ ಅಕ್ಕಮಹಾದೇವಿ ಕಂಬಳಿ ಅವರು ಸಭೆಯ ಗಮನಕ್ಕೆ ತಂದರು. ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ರಮೇಶ್ ಮೂಲಿಮನಿ ಅವರು ಮಾತನಾಡಿ, ಈ ಯೋಜನೆ ಕಳೆದ ಜುಲೈ ತಿಂಗಳಿನಲ್ಲೇ ಪ್ರಾರಂಭವಾಗಿದ್ದು, ಪ್ರತಿ ತಿಂಗಳ ಮೊದಲ ವಾರದಲ್ಲಿ ಹೆಣ್ಣು ಮಕ್ಕಳಿಗೆ ಶಾಲೆಗಳಲ್ಲಿ ಪ್ಯಾಡ್‌ಗಳನ್ನು ವಿತರಣೆ ಮಾಡಬೇಕು. ಈ ಕುರಿತಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿಯನ್ನು ಶಿಕ್ಷಣ ಇಲಾಖೆಗೆ ನೀಡಿದೆ. ಡಿಸೆಂಬರ್ ತಿಂಗಳವರೆಗೆ ಸಾಕಾಗುವಷ್ಟು ದಾಸ್ತಾನು ಈಗಾಗಲೆ ಪೂರೈಕೆ ಮಾಡಿದ್ದರೂ, ಇದುವರೆಗೂ ವಿತರಣೆಯಾಗಿರುವ ಬಗ್ಗೆ ಶಿಕ್ಷಣ ಇಲಾಖೆಗಳು ವರದಿ ನೀಡುತ್ತಿಲ್ಲ. ಇದರಿಂದಾಗಿ ಇಡೀ ರಾಜ್ಯದಲ್ಲಿಯೇ ಕೊಪ್ಪಳ ಜಿಲ್ಲೆಯಿಂದ ಮಾತ್ರ ಸರ್ಕಾರಕ್ಕೆ ಪ್ರಗತಿ ವರದಿ ಸಲ್ಲಿಸಲು ಸಾಧ್ಯವಾಗಿಲ್ಲ ಎಂದರು. ಇದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಂಸದ ಸಂಗಣ್ಣ ಕರಡಿ ಅವರು, ಹೆಣ್ಣು ಮಕ್ಕಳ ಸ್ವಚ್ಛತೆಗೆ ಬಹು ಉಪಯುಕ್ತವಾಗಿರುವ ಇಂತಹ ಯೋಜನೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಹಾಳಾಗುತ್ತಿದೆ. ಇದಕ್ಕೆ ಕಾರಣರಾದ ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗೈರು ಹಾಗೂ ಅಸಮರ್ಪಕ ವರದಿಗೆ ಅಸಮಾಧಾನ : ಸಂಸದರಾಗಿ ಅಧಿಕಾರ ವಹಿಸಿಕೊಂಡ ನಂತರ, ಇದೇ ಮೊದಲ ಬಾರಿಗೆ ಏರ್ಪಡಿಸಿದ ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಗೆ ಬಹಳಷ್ಟು ಅಧಿಕಾರಿಗಳು ಗೈರು ಹಾಜರಾಗಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ಅಧಿಕಾರಿಗಳು ಈ ರೀತಿ ನಿರ್ಲಕ್ಷ್ಯ ಧೋರಣೆ ತಳೆದಲ್ಲಿ, ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನೆಯನ್ನು ಯಾರೊಂದಿಗೆ ನಡೆಸಬೇಕು. ಇನ್ನು ಕೆಲವು ಅಧಿಕಾರಿಗಳು ಸಭೆಯಲ್ಲಿ ವರದಿ ಸಲ್ಲಿಸುವುದು ಒಂದಾದರೆ, ವರದಿಯ ಪುಸ್ತಕದಲ್ಲಿ ಬೇರೆಯದೇ ವರದಿ ಇರುತ್ತದೆ. ಈ ರೀತಿ ಆದಲ್ಲಿ ಪ್ರಗತಿ ಪರಿಶೀಲನಾ ಸಭೆಗೆ ಯಾವುದೇ ಅರ್ಥ ಇರುವುದಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಯೋಜನೆಗಳ ನಿಗದಿತ ಭೌತಿಕ ಮತ್ತು ಆರ್ಥಿಕ ಗುರಿ ಸಾಧನೆ ಅತ್ಯಗತ್ಯವಾಗಿದ್ದು, ಕೊಪ್ಪಳದಂತಹ ಹಿಂದುಳಿದ ಜಿಲ್ಲೆಯಲ್ಲಿ ಅಭಿವೃದ್ಧಿಯಾಗಬೇಕಾದರೆ, ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿಭಾಯಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಕಠಿಣ ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂಬುದಾಗಿ ಸಂಸದ ಸಂಗಣ್ಣ ಕರಡಿ ಅವರು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಅಮರೇಶ್ ಕುಳಗಿ, ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ, ಜಿಲ್ಲಾಧಿಕಾರಿ ಆರ್.ಆರ್. ಜನ್ನು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ, ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್, ಜಾಗೃತ ಮತ್ತು ಉಸ್ತುವಾರಿ ಸಮಿತಿಯ ಸದಸ್ಯರುಗಳಾದ ಶಿವನಗೌಡ, ಸತ್ಯನಾರಾಯಣರಾವ್ ದೇಶಪಾಂಡೆ, ಮನೋಹರ್, ಶೋಭಾ ನಗರಿ, ವಿಜಯಕುಮಾರ ಡೊಂಬರೆ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
0 comments:
Post a Comment