ಪ್ರತಿ ವರ್ಷದಂತೆ ಈ ವರ್ಷ ಕೂಡ ಜಿಲ್ಲೆಯಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಹೇಳಿದರು.
ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ವರ್ಷದಂತೆ ಈ ವರ್ಷವೂ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುವುದು. ರಾಜ್ಯೋತ್ಸವದ ಅಂಗವಾಗಿ ನವೆಂಬರ್ ೦೧ ರಂದು ಬೆಳಿಗ್ಗೆ ೭ ಗಂಟೆಗೆ ಕನ್ನಡ ತಾಯಿ ಭುವನೇಶ್ವರಿ ದೇವಿ ಭಾವಚಿತ್ರದೊಂದಿಗೆ ಅದ್ಧೂರಿ ಮೆರವಣಿಗೆ ತಹಸಿಲ್ದಾರರ ಕಚೇರಿಯಿಂದ ಹೊರಡಲಿದೆ. ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾ ತಂಡಗಳು ಭಾಗವಹಿಸಲಿವೆ. ಮೆರವಣಿಗೆಯಲ್ಲಿ ಎಲ್ಲ ಇಲಾಖಾ ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಳ್ಳುವುದು ಕಡ್ಡಾಯವಾಗಿದೆ. ಇದೇ ಸಂದರ್ಭದಲ್ಲಿ ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ, ಅಭಿವೃದ್ಧಿ ಬಿಂಬಿಸುವ ಸ್ಥಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿವೆ.
ಅಂದು ಬೆಳಿಗ್ಗೆ ೯ ಗಂಟೆಗೆ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ವಿಧ್ಯುಕ್ತವಾಗಿ ಕಾರ್ಯಕ್ರಮದ ಉದ್ಘಾಟನೆ ಹಾಗೂ ಧ್ವಜಾರೋಹಣ ಕಾರ್ಯಕ್ರಮ ನೆರವೇರಲಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ಎಸ್ ತಂಗಡಗಿ ಅವರು ಧ್ವಜಾರೋಹಣ ನೆರವೇರಿಸುವರು. ಕಾರ್ಯಕ್ರಮದಲ್ಲಿ ನಾಡು ನುಡಿಗಾಗಿ ಶ್ರಮಿಸಿದ ಕಲಾವಿದರು, ಸಾಹಿತಿಗಳು, ಕವಿಗಳನ್ನು ಸನ್ಮಾನಿಸಲಾಗುವುದು. ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಅದೇ ದಿನ ಸಂಜೆ ೬ ಗಂಟೆಗೆ ನಗರದ ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜು ಮೈದಾನದಲ್ಲಿ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲು ವ್ಯವಸ್ಥೆ ಮಾಡಲಾಗಿದೆ. ರಾಜ್ಯೋತ್ಸವ ಆಚರಣೆಗಾಗಿ ವಿವಿಧ ಉಪ ಸಮಿತಿಗಳನ್ನು ರಚಿಸಲಾಗಿದೆ. ಜಿಲ್ಲೆಯ ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ವಾರ ಕಾಲ ಕನ್ನಡ ಚಲನಚಿತ್ರಗಳನ್ನು ಕಡ್ಡಾಯವಾಗಿ ಪ್ರದರ್ಶಿಸಲು ಆದೇಶ ಹೊರಡಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ವಿವರಿಸಿದರು.
ರಾಜ್ಯೋತ್ಸವದ ಹಿಂದಿನ ದಿನ ನಗರದ ಪ್ರಮುಖ ರಸ್ತೆ, ಚರಂಡಿ ಮತ್ತು ಜಿಲ್ಲಾ ಕ್ರೀಡಾಂಗಣವನ್ನು ಸ್ವಚ್ಛಗೊಳಿಸಲು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವೇದಿಕೆ ಸಮಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಾಂಸ್ಕೃತಿಕ ಸಮಿತಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕರ ಅಧ್ಯಕ್ಷತೆಯಲ್ಲಿ ಸ್ತಬ್ಧಚಿತ್ರಗಳ ಸಮಿತಿ ಹಾಗೂ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸನ್ಮಾನ ಸಮಿತಿಯನ್ನು ಈ ಸಂದರ್ಭದಲ್ಲಿ ರಚಿಸಲಾಯಿತು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ಚೋರನೂರ, ಡಿವೈಎಸ್‌ಪಿ ರಾಜೀವ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಪಾಂಡುರಂಗಶೆಟ್ಟಿ, ಜಂಟಿಕೃಷಿ ನಿರ್ದೇಶಕ ಪದ್ಮಯ್ಯನಾಯಕ್ ಪಾಲ್ಗೊಂಡಿದ್ದರು. ಮಂಜುನಾಥ ಗೊಂಡಬಾಳ, ಶಿವಾನಂದ ಹೊದ್ಲೂರ, ಡಾ. ಜ್ಞಾನಸುಂದರ್, ಬಸವರಾಜ ಶೀಲವಂತರ್ ಸೇರಿದಂತೆ ಹಲವು ಸಂಘಟನೆಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆ ನೀಡಿದರು.
0 comments:
Post a Comment