ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ. 14 ರಂದು ಕನಕಗಿರಿಗೆ ಆಗಮಿಸಲಿದ್ದು, ಅವರ ಸ್ವಾಗತಕ್ಕೆ ಕನಕಗಿರಿಯಲ್ಲಿ ಸಕಲ ಸಿದ್ಧತೆಗಳನ್ನು ಜಿಲ್ಲಾ ಆಡಳಿತ ಕೈಗೊಂಡಿದೆ. ಭತ್ತದ ನಾಡು ಎನಿಸಿರುವ ಕೊಪ್ಪಳ ಜಿಲ್ಲೆಯಲ್ಲಿ, ಅದರಲ್ಲೂ ವಿಶೇಷವಾಗಿ ಕಾರಟಗಿಯಲ್ಲಿ ಈ ಭಾಗದ ಬಹುದಿನಗಳಿಂದ ಜಾರಿಯಾಗಲು ಕಾಯುತ್ತಿದ್ದ ರೈಸ್ ಟೆಕ್ನಾಲಜಿ ಪಾರ್ಕ್ ಯೋಜನೆಗೆ ಅ. 14 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಲಾನ್ಯಾಸ ನೀಡುವ ಮೂಲಕ ಅಧಿಕೃತವಾಗಿ ಚಾಲನೆ ದೊರೆಯಲಿದೆ. ಜಿಲ್ಲೆಯಲ್ಲಿ ತುಂಗಭದ್ರೆ ಹರಿಯುತ್ತಿದ್ದರೂ, ಗಂಗಾವತಿ ತಾಲೂಕಿನ ಹಲವಾರು ಗ್ರಾಮಗಳಲ್ಲಿ ಕುಡಿಯುವ ನೀರಿನ ತೊಂದರೆ ಎದುರಿಸಲಾಗುತ್ತಿದೆ. ಶುದ್ಧ ಕುಡಿಯುವ ನೀರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದ್ದರೂ, ನೀರಿನ ಕೊರತೆಯಿಂದ ಸಮಸ್ಯೆ ಹಾಗೆಯೇ ಉಳಿದಿದೆ. ಇಂತಹ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತುಂಗಭದ್ರಾ ನದಿಯಿಂದ ತಾಲೂಕಿನ ದೇವಲಾಪುರ ಸೇರಿದಂತೆ ಒಟ್ಟು 08 ಕೆರೆಗಳನ್ನು ತುಂಬಿಸಿ, ಕುಡಿಯುವ ನೀರು ಒದಗಿಸುವಂತಹ ಮಹತ್ವಪೂರ್ಣ ಯೋಜನೆಗೂ ಸಹ ಮುಖ್ಯಮಂತ್ರಿಗಳು ಅ. 14 ರಂದು ಚಾಲನೆ ನೀಡಲಿದ್ದಾರೆ. ಇದಲ್ಲದೆ ಬಹುಗ್ರಾಮಗಳ ಕುಡಿಯುವ ನೀರಿನ ಯೋಜನೆಗಳು, ರಸ್ತೆಗಳ ಅಭಿವೃದ್ಧಿ, ಸೇತುವೆ ನಿರ್ಮಾಣ ಸೇರಿದಂತೆ ಹತ್ತು ಹಲವು ಯೋಜನೆಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡುವರು. ಕನಕಗಿರಿ ಕ್ಷೇತ್ರದ ಅಭಿವೃದ್ಧಿಗೆ ಪೂರಕವೆನಿಸಿರುವ ಹಲವಾರು ಮಹತ್ವಪೂರ್ಣ ಯೋಜನೆಗಳಿಗೆ ಹಸಿರು ನಿಶಾನೆ ತೋರಿಸಲು ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ವಾಗತಿಸಲು ಇಡೀ ಕನಕಗಿರಿ ಸಜ್ಜಾಗಿದ್ದು, ಗ್ರಾಮದ ಪ್ರಮುಖ ರಸ್ತೆಗಳನ್ನು ಸ್ವಚ್ಛಗೊಳಿಸುವ ಕಾರ್ಯ ಭರದಿಂದ ಸಾಗಿದೆ. ಅಲ್ಲದೆ ಮುಖ್ಯಮಂತ್ರಿಗಳಿಗೆ ಸ್ವಾಗತ ಕೋರುವ ಹಲವಾರು ಕಟೌಟ್‍ಗಳು ಗ್ರಾಮದಲ್ಲಿ ರಾರಾಜಿಸುತ್ತಿದ್ದು, ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳಿಗೆ ವಿಶೇಷ ಸ್ವಾಗತ ಕಮಾನುಗಳನ್ನು ಜೋಡಿಸಲಾಗಿದೆ. ಸಂಪರ್ಕ ರಸ್ತೆಗಳನ್ನು ದುರಸ್ತಿಗೊಳಿಸುವ ಕಾರ್ಯವೂ ಭರದಿಂದ ಸಾಗಿದ್ದು, ಕನಕಗಿರಿಯ ಸರ್ಕಾರಿ ಪ.ಪೂ. ಕಾಲೇಜು ಆವರಣದಲ್ಲಿ ಕಾರ್ಯಕ್ರಮಕ್ಕೆ ಬೃಹತ್ ಪೆಂಡಾಲ್ ನಿರ್ಮಿಸಲಾಗಿದೆ. ಪೆಂಡಾಲ್ ನಲ್ಲಿ ಕಾರ್ಯಕ್ರಮದ ವೇದಿಕೆ ಅಲಂಕಾರಕ್ಕೆ ವಿಶೇಷ ಆಸಕ್ತಿ ವಹಿಸಲಾಗಿದ್ದು, ಸಾರ್ವಜನಿಕರ ವೀಕ್ಷಣೆಗೆ ವೇದಿಕೆಯ ಎರಡೂ ಬದಿಗಳಲ್ಲಿ ಬೃಹತ್ ಎಲ್‍ಸಿಡಿ ಪರದೆಯನ್ನು ಅಳವಡಿಸಲಾಗುತ್ತಿದೆ. ಕಾರ್ಯಕ್ರಮದ ಸಿದ್ಧತೆ ಕುರಿತಂತೆ ವಿವರಗಳನ್ನು ನೀಡಿದ ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು, ಹತ್ತು ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲು ಕೊಪ್ಪಳ ಜಿಲ್ಲೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿಗಳ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಕಲ ರೀತಿಯಲ್ಲಿ ಜಿಲ್ಲಾಡಳಿತ ಸಿದ್ಧತೆ ಕೈಗೊಂಡಿದೆ ಎಂದು ಸಿದ್ಧತೆ ಕುರಿತು ತೃಪ್ತಿ ವ್ಯಕ್ತಪಡಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಟಿ.ಡಿ. ಪವಾರ್ ಅವರು ಕನಕಗಿರಿಯ ಪೊಲೀಸ್ ಠಾಣೆ ಆವರಣದಲ್ಲಿ ಪೊಲೀಸ್ ಬಂದೋಬಸ್ತ್ ಕುರಿತಂತೆ ಪೊಲೀಸ್ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆಯ ಕಾರ್ಯದಲ್ಲಿ ತೊಡಗಿದ್ದರು. ಮುಖ್ಯಮಂತ್ರಿಗಳ ಕಾರ್ಯಕ್ರಮ ಸುಸೂತ್ರವಾಗಿ ನಡೆಯಲು ಅನುಕೂಲವಾಗುವಂತೆ 3-ಡಿವೈಎಸ್‍ಪಿ, 10- ಸಿಪಿಐ, 33-ಪಿಎಸ್‍ಐ, 55-ಎಎಸ್‍ಐ, 110- ಹೆಡ್‍ಕಾನ್ಸ್‍ಟೆಬಲ್ಸ್, 235- ಪೊಲೀಸ್ ಪೇದೆಗಳು, 35- ಮಹಿಳಾ ಪೊಲೀಸ್ ಪೇದೆಗಳು, 210- ಗೃಹರಕ್ಷಕದಳ ಸಿಬ್ಬಂದಿ, 6- ಜಿಲ್ಲಾ ಮೀಸಲು ಪಡೆ, 02- ರಾಜ್ಯ ಮೀಸಲು ಪಡೆ ಹಾಗೂ 02- ಕ್ಷಿಪ್ರ ಪ್ರಹಾರ ದಳ ತಂಡವನ್ನು ರಚಿಸಲಾಗಿದೆ ಎಂಬುದಾಗಿ ವಿವರಿಸಿದರು. ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಉಪವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ್, ಸಣ್ಣ ನೀರಾವರಿ ಇಲಾಖೆ ಕಾರ್ಯಪಾಲಕ ಅಭಿಯಂತರ ಮುರಳಿಧರ್ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Home
»
»Unlabelled
» ಮುಖ್ಯಮಂತ್ರಿಗಳ ಸ್ವಾಗತಕ್ಕೆ ಸಿದ್ದತೆ
Subscribe to:
Post Comments (Atom)
0 comments:
Post a Comment