PLEASE LOGIN TO KANNADANET.COM FOR REGULAR NEWS-UPDATES


  ಭಕ್ತ ಕನಕದಾಸರ ಜಯಂತಿ ಆಚರಣೆಯನ್ನು ನ. ೦೮ ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಭಕ್ತಿ-ಭಾವದಿಂದ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ಹೇಳಿದರು.  
   ಕನಕದಾಸರ ಜಯಂತಿ ಆಚರಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. 
  ದಾಸ ಸಾಹಿತ್ಯಕ್ಕೆ  ಅಪಾರ ಕೊಡುಗೆ ನೀಡಿರುವ ಭಕ್ತ ಕನಕದಾಸರ ಜಯಂತಿ ಉತ್ಸವವನ್ನು  ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ತಾಲೂಕು ಕೇಂದ್ರಗಳಲ್ಲಿ ವಿಜೃಂಭಣೆಯಿಂದ ಆಚರಿಸಲು ಸರ್ಕಾರ ಸೂಚನೆ ನೀಡಿದೆ. ನ. ೦೮ ರಂದು ಕನಕದಾಸರ ಜಯಂತಿಯನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಉದ್ದೆಶಿಸಲಾಗಿದೆ. ಅಂದು ಬೆಳಿಗ್ಗೆ ೯ ಗಂಟೆಗೆ ಕನಕದಾಸರ ಭಾವಚಿತ್ರದೊಂದಿಗೆ ಮೆರವಣಿಗೆಯು ನಗರದ ಸಿರಸಪ್ಪಯ್ಯನ ಮಠದಿಂದ ಹೊರಟು, ಗಡಿಯಾರ ಕಂಬ, ಜವಾಹರ ರಸ್ತೆ, ಅಶೋಕ ಸರ್ಕಲ್ ಮೂಲಕ ಮಧ್ಯಾಹ್ನ ೧ ಗಂಟೆಗೆ ಸಾಹಿತ್ಯ ಭವನ ತಲುಪಲಿದೆ. ತಾಷರಂಡೋಲು, ಡೊಳ್ಳು ಕುಣಿತ ಸೇರಿದಂತೆ ಹಲವು ಜಾನಪದ ಕಲಾ ತಂಡಗಳು ಭಾಗವಹಿಸಿ, ಮೆರವಣಿಗೆಯನ್ನು ಆಕರ್ಷಕಗೊಳಿಸಲಿವೆ.  ಮಧ್ಯಾಹ್ನ ೧ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಕನಕದಾಸರ ಜಯಂತಿಯ ಸಮಾರಂಭ ಜರುಗಲಿದೆ.  ಕನಕದಾಸರ ಜಯಂತಿ ಆಚರಣೆ ಅಂಗವಾಗಿ ಸಮಾರಂಭದಲ್ಲಿ ವಿಶೇಷ ಉಪನ್ಯಾಸ ನೀಡಲು ಬಳ್ಳಾರಿ ಜಿಲ್ಲೆಯ ಪ್ರೊ. ಲಿಂಗದಹಳ್ಳಿ ಹಾಲಪ್ಪ ಅವರನ್ನು ಆಹ್ವಾನಿಸಲಾಗುವುದು.  ಕನಕದಾಸರ ಜಯಂತಿ ಆಚರಣೆಯಲ್ಲಿ ಎಲ್ಲ ಸಾರ್ವಜನಿಕರು, ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.
  ಸಭೆಯಲ್ಲಿ ಭಾಗವಹಿಸಿದ್ದ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಮಾತನಾಡಿ, ಕನಕದಾಸರ ಜಯಂತಿ ಆಚರಣೆಯ ಅಂಗವಾಗಿ ಕೊಪ್ಪಳ ನಗರದ ಎಲ್ಲ ಪ್ರಮುಖ ರಸ್ತೆಗಳನ್ನು ಸ್ವಚ್ಛಗೊಳಿಸಿ, ಮೆರವಣಿಗೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು.  ಅಲ್ಲದೆ ಮೆರವಣಿಗೆ ಹಾಗೂ ಸಮಾರಂಭದಲ್ಲಿ ಭಾಗವಹಿಸುವವರಿಗೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ವ್ಯವಸ್ಥೆಗೊಳಿಸಬೇಕು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳಿಸಿ ಉತ್ತೀರ್ಣರಾದ ಸಮಾಜದ ವಿದ್ಯಾರ್ಥಿಗಳಿಗೆ ಹಾಗೂ ಉತ್ತಮ ಸಾಧನೆಗೈದ ಗಣ್ಯರಿಗೆ ಈ ಸಂದರ್ಭದಲ್ಲಿ ಸನ್ಮಾನಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.  ಅಲ್ಲದೆ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಆಚರಿಸಲು ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.
        ಸಭೆಯಲ್ಲಿ ಜಿಲ್ಲಾ ಪಂಚಾಯತಿ ಸದಸ್ಯ ಈರಪ್ಪ ಕುಡಗುಂಟಿ, ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್,  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ಚೋರನೂರ, ಡಿವೈಎಸ್‌ಪಿ ಎಂ. ರಾಜೀವ್, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಗಣ್ಯರಾದ  ಶಿವಾನಂದ ಹೊದ್ಲೂರು, ಡಾ. ಜ್ಞಾನಸುಂದರ್, ಮಂಜುನಾಥ ಗೊಂಡಬಾಳ, ಸಮಾಜದ ಅನೇಕ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿ ಉಪಯುಕ್ತ ಸಲಹೆ ಸೂಚನೆ ನೀಡಿದರು.

Advertisement

0 comments:

Post a Comment

 
Top