PLEASE LOGIN TO KANNADANET.COM FOR REGULAR NEWS-UPDATES

 ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳನ್ನು ರಕ್ಷಿಸಲು ಗ್ರಾಮೀಣ ಮಟ್ಟದಲ್ಲಿ ಮಕ್ಕಳ ಸ್ಥಿತಿಗತಿಗಳನ್ನು ಚರ್ಚಿಸಿ ವಿಶ್ಲೇಷಿಸಿ ಪಂಚಾಯತ್ ಮಟ್ಟದಲ್ಲೇ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ  ಮಕ್ಕಳ ಹಕ್ಕುಗಳ ಗ್ರಾಮ ಸಭೆಯನ್ನು ಇದೇ ನ.೧೪ ರಿಂದ ನ.೨೯ ರವರೆಗೆ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಹಮ್ಮಿಕೊಳ್ಳಲಾಗಿದ್ದು ವಿವಿಧ ಅಂಶಗಳ ಬಗ್ಗೆ ಚರ್ಚಿಸಲು ಸಂಬಂಧಿಸಿದ ಗ್ರಾ.ಪಂ. ಪಿಡಿಓ/ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ.
ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆ ೧೯೮೯ ಜಾರಿಯಾಗಿ ೨೫ ವರ್ಷಗಳನ್ನು ಪೂರೈಸುತ್ತಿದೆ. ಈ ಒಡಂಬಡಿಕೆಗೆ ಭಾರತ ಸರ್ಕಾರವು ೧೯೯೨ರಲ್ಲಿ ಸಹಿ ಮಾಡಿ ಮಕ್ಕಳ ಹಕ್ಕುಗಳ ರಕ್ಷಣೆಗೆ ತನ್ನ ಬದ್ಧತೆಯನ್ನು ಸೂಚಿಸಿ ಮಕ್ಕಳ ಪರವಾದ ಹಲವಾರು ನಿಯಮ, ಕಾಯ್ದೆ, ಯೋಜನೆ, ಕಾರ್ಯಕ್ರಮಗಳನ್ನು ದೇಶದಾದ್ಯಂತ ಜಾರಿಗೊಳಿಸುತ್ತಾ ಬಂದಿದೆ. ಮಕ್ಕಳು ನಮ್ಮ ಸಮಾಜದ ಅವಿಭಾಜ್ಯ ಅಂಗ. ಅವರ ಉಳಿವು, ರಕ್ಷಣೆ ಮತ್ತು ಅಭಿವೃದ್ಧಿ ಎಲ್ಲಾ ಸಮುದಾಯಗಳ ಕರ್ತವ್ಯ. ಆಡಳಿತ ವಿಕೇಂದ್ರೀಕರಣದ ಪ್ರಮುಖ ಹಂತವಾದ ಗ್ರಾಮ ಪಂಚಾಯತ್ ಮತ್ತು ವಾರ್ಡ್ ಮಟ್ಟದಲ್ಲಿಯೇ ಮಕ್ಕಳ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳನ್ನು ಗುರುತಿಸಿ ಅಂತಹವುಗಳನ್ನು ತಡೆದು ಮಕ್ಕಳನ್ನು ರಕ್ಷಿಸುವಲ್ಲಿ ಗ್ರಾಮ ಪಂಚಾಯತಿಗಳು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಇಲಾಖೆಗಳ ಮಹತ್ತರ ಜವಾಬ್ದಾರಿಯಾಗಿದೆ.
ವಿವಿಧ ಅಂಶಗಳಾದ ಶಿಶು ಮರಣ ತಡೆಯುವುದು, ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಪೌಷ್ಠಿಕ ಆಹಾರವನ್ನು ಒದಗಿಸುವುದು, ಅಪೌಷ್ಟಿಕತೆಯನ್ನು ನಿರ್ಮೂಲನೆ ಮಾಡುವುದು, ಎಲ್ಲಾ ೩ ವರ್ಷದಿಂದ ೬ ವರ್ಷದ ಮಕ್ಕಳು ಅಂಗನವಾಡಿಗಳಲ್ಲಿ, ೬ ರಿಂದ ೧೪ ವರ್ಷದ ಮಕ್ಕಳು ಶಾಲೆಗಳಲ್ಲಿ ದಾಖಲಾಗಿ ಶಿಕ್ಷಣವನ್ನು ಪಡೆಯುವುದು ಮತ್ತು ೧೪ ರಿಂದ ೧೮ ವರ್ಷದ ಮಕ್ಕಳು ಶಿಕ್ಷಣದ ಮುಖ್ಯವಾಹಿನಿಯಲ್ಲಿ ಇರುವಂತೆ ಮಾಡುವುದು. ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಆಟಪಾಠಗಳ ವ್ಯವಸ್ಥೆಯನ್ನು ವೈಜ್ಞಾನಿಕವಾಗಿ ರೂಪಿಸುವುದು. ಬಾಲಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ, ಜೀತ ಪದ್ಧತಿ, ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವುದು ಮತ್ತು ಅವುಗಳನ್ನು ನಿರ್ಮೂಲನೆ ಮಾಡುವ ಬಗ್ಗೆ ಜಾಗೃತಿ ಮೂಡಿಸುವುದು. ಹೆಣ್ಣು ಮಕ್ಕಳ ಪೋಷಣೆ ಹಾಗೂ ರಕ್ಷಣೆ. ಮಕ್ಕಳ ಭಾಗವಹಿಸುವ ಹಕ್ಕನ್ನು ಖಾತರಿ ಪಡಿಸಬೇಕು.
ಮಕ್ಕಳ ಸಮಸ್ಯೆಗಳನ್ನು ನಿವಾರಿಸುವ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್ ಮತ್ತು ಇಲಾಖೆಗಳು ಕೈಗೊಳ್ಳುವ ಕ್ರಮಗಳ ಬಗ್ಗೆ ಗ್ರಾಮ ಸಭೆಯಲ್ಲಿ ಚರ್ಚೆ ನಡೆಸಬೇಕು. ಮಕ್ಕಳ ಹಕ್ಕುಗಳ ಗ್ರಾಮ ಸಭೆಯಲ್ಲಿ ಮಕ್ಕಳು, ಪಾಲಕರು, ಗ್ರಾಮಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು, ಯುನಿಸೆಫ್ ಮಕ್ಕಳ ರಕ್ಷಣಾ ಯೋಜನೆಯ ಸಮುದಾಯ ಸಂಘಟಕರು, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂಧಿಗಳು, ಬಾಲ ಕಾರ್ಮಿಕ ಯೋಜನಾ ಸಂಘಧ ಸಿಬ್ಬಂಧಿಗಳು, ವಿವಿಧ ಸಂಘ ಸಂಸ್ಥೆಗಳು, ಶಾಲಾ ಮುಖ್ಯೋಪಾಧ್ಯಾಯರು, ಅಂಗನವಾಡಿ ಕಾರ್ಯಕರ್ತರು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಅಂಗನವಾಡಿ ಮೇಲ್ವಿಚಾರಕರು, ಪೊಲೀಸ್ ಅಧಿಕಾರಿಗಳು, ಸ್ಥಳೀಯ ಗ್ರಾಮ ಲೆಕ್ಕಿಗರು, ಆರೋಗ್ಯ ಕಾರ್ಯಕರ್ತರು ಹಾಗೂ ಇತರರೊಂದಿಗೆ ಗ್ರಾಮ ಸಭೆಯನ್ನು ಆಯೋಜಿಸಬೇಕು.
ಗ್ರಾಮಸಭೆಯನ್ನು ನಡೆಸಬೇಕಾದ ಪೂರ್ವ ತಯಾರಿ ಸಭೆಯಲ್ಲಿ ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಪಿ.ಡಿ.ಒ/ಕಾರ್ಯದರ್ಶಿ ಮತ್ತು ಎಲ್ಲಾ ಸದಸ್ಯರುಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಂಘ ಸಂಸ್ಥೆಯ ಪ್ರತಿನಿಧಿಗಳನ್ನು ಸೇರಿಸಿ ಆಯೋಜಿಸಬೇಕು. ಮಕ್ಕಳ ಹಕ್ಕುಗಳ ಗ್ರಾಮ ಸಭೆಯಲ್ಲಿ ಮಕ್ಕಳು ಗ್ರಾಮ ಪಂಚಾಯತ್‌ನ ಮುಂದಿಡುವ ಸಮಸ್ಯೆಗಳಿಗೆ ಅಗತ್ಯ ಪರಿಹಾರ ಕ್ರಮಗಳನ್ನು ನಿಗದಿತ ಸಮಯದಲ್ಲಿ ಪೂರೈಸಬೇಕು. ಅಗತ್ಯವಿದ್ದರೆ ವಾರ್ಷಿಕ ಕ್ರಿಯಾಯೋಜನೆಯಲ್ಲಿ ಸೇರಿಸುವುದು ಮತ್ತು ಅವುಗಳನ್ನು ಪಂಚತಂತ್ರ ತಂತ್ರಜ್ಞಾನದಲ್ಲಿ ಅಳವಡಿಸಬೇಕು. ಪೂರ್ವ ತಯಾರಿ ಸಭೆಯ ವರದಿ, ಗ್ರಾಮ ಸಭೆಯ ನಡಾವಳಿ ಮುಂತಾದ ವರದಿಗಳನ್ನು ಗ್ರಾಮ ಸಭೆ ಮುಗಿದ ೧೦ ದಿನದ ಒಳಗೆ ಆಯಾ ತಾಲ್ಲೂಕುಗಳ ತಾಲ್ಲೂಕ ಪಂಚಾಯತ್ ಕಾರ್ಯನಿವಾಹಕ ಅಧಿಕಾರಿಗಳ ಮುಖಾಂತರ ಜಿಲ್ಲಾಧಿಕಾರಿಗಳ ಕಛೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಆರ್.ಆರ್.ಜನ್ನು ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ  ತಿಳಿಸಿದ್ದಾರೆ.

Advertisement

0 comments:

Post a Comment

 
Top