PLEASE LOGIN TO KANNADANET.COM FOR REGULAR NEWS-UPDATES





 ಬೆಂಬಲ ಬೆಲೆ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರಿಂದ ಮೆಕ್ಕೆಜೋಳ ಖರೀದಿಸುವ ಕಾರ್ಯಕ್ರಮಕ್ಕೆ ನಗರದ ಎಪಿಎಂಸಿ ಆವರಣದಲ್ಲಿ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಸೋಮವಾರ ಚಾಲನೆ ನೀಡಿದರು.
          ಮೆಕ್ಕೆಜೋಳ ದರ ಕುಸಿತದ ಹಿನ್ನೆಲೆಯಲ್ಲಿ ರೈತರಿಗೆ ತೊಂದರೆಯಾಗದಂತೆ, ಪ್ರತಿ ಕ್ವಿಂಟಾಲ್ ಎಫ್.ಎ.ಕ್ಯೂ ಗುಣಮಟ್ಟದ ಮೆಕ್ಕೆಜೋಳಕ್ಕೆ ೧೧೦೦ ರೂ. ದರದಂತೆ ಸಣ್ಣ ಮತ್ತು ಅತಿ ಸಣ್ಣ ರೈತರಿಂದ ಗರಿಷ್ಠ ೫೦ ಕ್ವಿಂಟಾಲ್ ಮೀರದಂತೆ ಖರೀದಿಸಲಾಗುವುದು. ಖರೀದಿ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಪಾವತಿಸುವ ವ್ಯವಸ್ಥೆ ಮಾಡಲಾಗುವುದು.  ಒಂದು ವೇಳೆ ಕೇಂದ್ರ ಸರ್ಕಾರವು ಕನಿಷ್ಠ ಬೆಂಬಲ ಬೆಲೆಯಡಿ ಸಹಾಯಧನವನ್ನು ನೀಡಿದಲ್ಲಿ, ಅದರ ವ್ಯತ್ಯಾಸದ ಮೊತ್ತ ಪ್ರತಿ ಕ್ವಿಂಟಾಲ್‌ಗೆ ರೂ. ೨೧೦ ಗಳನ್ನು ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡುವಂತೆ ಈಗಾಗಲೆ ಸರ್ಕಾರ ಆದೇಶದಲ್ಲಿ ತಿಳಿಸಿದೆ. ಕೊಪ್ಪಳ ಜಿಲ್ಲೆಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಇವರನ್ನು ಖರೀದಿ ಏಜೆನ್ಸಿಯಾಗಿ ನೇಮಕ ಮಾಡಲಾಗಿದ್ದು, ರೈತರು ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು.
         ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಆರ್. ಲಂಬೂ ಅವರು ಮಾತನಾಡಿ, ಸಣ್ಣ ಮತ್ತು ಅತಿ ಸಣ್ಣ ರೈತರು ಖರೀದಿ ಕೇಂದ್ರಕ್ಕೆ ಬರುವ ಸಂದರ್ಭದಲ್ಲಿ ಬೆಳೆ ದೃಢೀಕರಣ ಪತ್ರ, ಮತದಾರರ ಗುರುತಿನ ಚೀಟಿ ಅಥವಾ ಪಡಿತರ ಚೀಟಿ ಅಥವಾ ಆಧಾರ್ ಕಾರ್ಡ್, ಪಹಣಿ ಪತ್ರಿಕೆ, ಬ್ಯಾಂಕ್ ಖಾತೆಯ ಪ್ರಿಂಟೆಡ್ ಪುಸ್ತಕದ ಜೆರಾಕ್ಸ್ ಪ್ರತಿ ಇವಿಷ್ಟು ದಾಖಲೆಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಬೆಂಬಲ ಬೆಲೆ ಯೋಜನೆಯಡಿ ಮಾರಾಟ ಮಾಡಲಾಗುವ ಮೆಕ್ಕೆಜೋಳ ಚೆನ್ನಾಗಿ ಒಣಗಿರಬೇಕು, ಗಾತ್ರ, ಬಣ್ಣ ಹಾಗೂ ಆಕಾರ ಹೊಂದಿದ್ದು, ಗಟ್ಟಿ ಮತ್ತು ಸ್ವಚ್ಛವಾಗಿರಬೇಕು.  ಇತರೆ ಕಲ್ಮಶಗಳಿಂದ ಮುಕ್ತವಾಗಿರಬೇಕು ಎಂದರು.
         ಕೊಪ್ಪಳ ಎಪಿಎಂಸಿ ಅಧ್ಯಕ್ಷ ಗವಿಸಿದ್ದಪ್ಪ ಮುದಗಲ್, ಸದಸ್ಯ ಹನುಮರಡ್ಡಿ ಹಂಗನಕಟ್ಟಿ, ನಗರಸಭೆ ಸದಸ್ಯ ಮುತ್ತುರಾಜ ಕುಷ್ಟಗಿ, ಅನಿಕೇತ ಅಂಗಡಿ ಸೇರಿದಂತೆ ವಿವಿಧ ಗಣ್ಯರು, ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Advertisement

0 comments:

Post a Comment

 
Top