ನಿಜ ಶರಣ ಅಂಬಿಗರ ಚೌಡಯ್ಯ ಅವರ ಜಯಂತಿ ಆಚರಣೆಯನ್ನು ಜ. ೨೧ ರಂದು ರಂದು ಕೊಪ್ಪಳ ಜಿಲ್ಲಾ ಕೇಂದ್ರದಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದ್ದು, ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಹೇಳಿದರು.
ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಣೆಯನ್ನು ಸರ್ಕಾರಿ ಕಾರ್ಯಕ್ರಮವನ್ನಾಗಿ ಆಚರಿಸುವ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ನಿಜ ಶರಣ ಅಂಬಿಗರ ಚೌಡಯ್ಯ ಜಯಂತಿ ಉತ್ಸವವನ್ನು ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ತಾಲೂಕು ಕೇಂದ್ರಗಳಲ್ಲಿ ವಿಜೃಂಭಣೆಯಿಂದ ಆಚರಿಸಲು ಸರ್ಕಾರ ಸೂಚನೆ ನೀಡಿದೆ. ಜ. ೨೧ ರಂದು ಜಯಂತಿಯನ್ನು ಜಿಲ್ಲೆಯಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಲು ಉದ್ದೆಶಿಸಲಾಗಿದೆ. ಅಂದು ಬೆಳಿಗ್ಗೆ ೯ ಗಂಟೆಗೆ ನಿಜ ಶರಣ ಅಂಬಿಗರ ಚೌಡಯ್ಯ ಅವರ ಭಾವಚಿತ್ರದೊಂದಿಗೆ ಮೆರವಣಿಗೆಯು ನಗರದ ಸಿರಸಪ್ಪಯ್ಯನ ಮಠದಿಂದ ಹೊರಟು, ಗಡಿಯಾರ ಕಂಬ, ಜವಾಹರ ರಸ್ತೆ, ಅಶೋಕ ಸರ್ಕಲ್ ಮೂಲಕ ಸಾಹಿತ್ಯ ಭವನ ತಲುಪಲಿದೆ. ಡೊಳ್ಳು ಕುಣಿತ ಸೇರಿದಂತೆ ಹಲವು ಜಾನಪದ ಕಲಾ ತಂಡಗಳು ಭಾಗವಹಿಸಿ, ಮೆರವಣಿಗೆಯನ್ನು ಆಕರ್ಷಕಗೊಳಿಸಲಿವೆ. ಮಧ್ಯಾಹ್ನ ೧ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಅಂಗವಾಗಿ ಸಮಾರಂಭ ಜರುಗಲಿದೆ. ಸಮಾರಂಭದಲ್ಲಿ ವಿಶೇಷ ಉಪನ್ಯಾಸ ನೀಡಲು ಬಾಗಲಕೋಟೆಯ ಕೃಷ್ಣಯ್ಯ ಶಾಸ್ತ್ರಿ ಅವರನ್ನು ಆಹ್ವಾನಿಸಲಾಗುವುದು. ಜಯಂತಿ ಆಚರಣೆಯಲ್ಲಿ ಎಲ್ಲ ಸಾರ್ವಜನಿಕರು, ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್ ಅವರು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.
ನಿಜ ಶರಣ ಅಂಬಿಗರ ಜಯಂತಿಯನ್ನು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಹಾಗೂ ಎಲ್ಲ ವಸತಿ ನಿಲಯಗಳಲ್ಲಿ ಕಡ್ಡಾಯವಾಗಿ ಆಚರಿಸಲು ಸಂಬಂಧಪಟ್ಟವರಿಗೆ ಸೂಚನೆ ನೀಡಲು, ಅಲ್ಲದೆ ಮೆರವಣಿಗೆ ಹಾಗೂ ಸಮಾರಂಭದಲ್ಲಿ ಗೈರು ಹಾಜರಾಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.
ಸಭೆಯಲಿ ಡಿವೈಎಸ್‌ಪಿ ಎಂ. ರಾಜೀವ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ವೈ.ಹೆಚ್. ಲಂಬು, ಡಿಡಿಪಿಐ ಶ್ಯಾಮಸುಂದರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ್ ಬಾಸೂರ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಗಣ್ಯರಾದ ಯಮನಪ್ಪ ಕಬ್ಬೇರ್, ಬಾಳಪ್ಪ ಬಾರಕೇರ, ಶಿವಾನಂದ ಹೊದ್ಲೂರು, ಮಂಜುನಾಥ ಗೊಂಡಬಾಳ, ಸೇರಿದಂತೆ ಸಮಾಜದ ಅನೇಕ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿ ಉಪಯುಕ್ತ ಸಲಹೆ ಸೂಚನೆ ನೀಡಿದರು.
0 comments:
Post a Comment