ಬೆಂಗಳೂರು, ಸಂಸತ್ ಆದರ್ಶ ಗ್ರಾಮ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನಗೊಳಿಸಲು ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ. ಪಾಟೀಲ್ ಅವರು ತಿಳಿಸಿದರು.
ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಏರ್ಪಡಿಸಿದ್ದ ಸಂಸದಿರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಪರಿಚಯಾತ್ಮಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಎಚ್.ಕೆ. ಪಾಟೀಲ್ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಜಾರಿಗೆ ತಂದಿರುವ 21 ಅಂಶಗಳ ಅಭಿವೃದ್ಧಿ ಯೋಜನೆಗಳನ್ನು ಸಂಸದರ ಆದರ್ಶ ಗ್ರಾಮ ಯೋಜನೆ ಅನುಷ್ಠಾನಗೊಳಿಸುವಾಗ ಅಳವಡಿಸಿಕೊಳ್ಳಲಾಗುವುದೆಂದರು.
ಸಂಸತ್ ಆದರ್ಶ ಗ್ರಾಮ ಯೋಜನೆಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದ ಸಚಿವರು ಕಳೆದ 25 ವರ್ಷಗಳಿಂದ ರಾಜ್ಯ ಸರ್ಕಾರ ಹಲವಾರು ಯೋಜನೆಗಳ ಮೂಲಕ ಗ್ರಾಮೀಣಾಭಿವೃದ್ಧಿಗೆ ಹೆಚ್ವಿನ ಆದ್ಯತೆ ನೀಡಿ ಕೆಲಸ ಮಾಡುತ್ತಿದೆ ಎಂದರು.
ಸಂಸದರ ಆದರ್ಶ ಗ್ರಾಮ ಯೋಜನೆ ಅನುಷ್ಠಾನ ಯೋಜನೆಗೆ ವಿಶೇಷ ಅನುದಾನವನ್ನು ಪ್ರತ್ಯೇಕವಾಗಿ ಮೀಸಲಿಡಬೇಕೆಂಬುದು ಸಭೆಯಲ್ಲಿ ಪಾಲ್ಗೊಂಡ ಬಹುತೇಕ ಸಂಸದರ ಅಭಿಪ್ರಾಯವಾಗಿದೆ ಎಂದರು.
ರಾಷ್ಟ್ರದಲ್ಲಿ ಸಂಸದರ ಆದರ್ಶ ಗ್ರಾಮ ಯೋಜನೆ ಜಾರಿ ಬಗ್ಗೆ ಪ್ರಧಾನ ಮಂತ್ರಿಗಳು ವಿಶೇಷ ಒತ್ತು ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ ಎಂದ ಸಚಿವರು ನರೇಗಾ ಯೋಜನೆಯಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಹಣ ನೀಡುವಂತೆ ಕೇಂದ್ರದ ಗ್ರಾಮೀಣಾಭಿವೃದ್ಧಿ ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದರು. ಸಭೆಯಲ್ಲಿ ರಾಜ್ಯದ ಸಂಸದರು, ಜಿಲ್ಲಾಧಿಕಾರಿಗಳು ಉಪಸ್ಥಿತರಿದ್ದರು.
0 comments:
Post a Comment