ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ಗತ ವೈಭವ ಮರುಕಳಿಸುವ ರೀತಿಯಲ್ಲಿ ಆನೆಗೊಂದಿ ಉತ್ಸವವನ್ನು ಬರುವ ಏ. ೧೧ ಮತ್ತು ೧೨ ರಂದು ಎರಡು ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿ ಅವರು ಹೇಳಿದರು.
ಆನೆಗೊಂದಿ ಉತ್ಸವ ಆಚರಣೆ ಸಂಬಂಧ ಗಂಗಾವತಿಯ ಐ.ಎಂ.ಎ ಸಭಾಂಗಣದಲ್ಲಿ ಗುರುವಾರದಂದು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ಮಾತನಾಡಿ, ಉತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಸಿದ್ಧತೆಗಳನ್ನು ಕೈಗೊಳ್ಳಲು ಸಾಕಷ್ಟು ಕಾಲಾವಕಾಶ ಇರುವುದರಿಂದ, ಸಮರ್ಪಕ ಸಿದ್ಧತೆ ಕೈಗೊಳ್ಳಲಾಗುವುದು. ನೆರೆಹೊರೆಯ ಜಿಲ್ಲೆ ಹಾಗೂ ರಾಜ್ಯಗಳಿಂದಲೂ ಖ್ಯಾತ ಕಲಾವಿದರನ್ನು ಆಹ್ವಾನಿಸಲಾಗುವುದು. ಉತ್ಸವವನ್ನು ಯಶಸ್ವಿಯಾಗಿ ಆಚರಿಸಲು ವಿವಿಧ ಉಪ ಸಮಿತಿಗಳನ್ನು ರಚಿಸಿ, ಅಧಿಕಾರಿಗಳಿಗೆ ಹೊಣೆಗಾರಿಕೆ ನೀಡಲಾಗುವುದು ಎಂದರು.
ಆನೆಗೊಂದಿ ಉತ್ಸವ ಹಂಪಿ ಉತ್ಸವದಷ್ಟೇ ವಿಜೃಂಭಣೆಯಿಂದ ಜರುಗಬೇಕು, ಸ್ಥಳೀಯ ಕಲಾವಿದರಿಗೆ, ಸಾಹಿತಿಗಳಿಗೆ, ಕವಿಗಳಿಗೆ ಆದ್ಯತೆ ನೀಡಬೇಕು. ಸಾರ್ವಜನಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ, ಊಟದ ವ್ಯವಸ್ಥೆ ಕಲ್ಪಿಸಬೇಕು. ಆನೆಗೊಂದಿ ಶಿಲ್ಪ ಕಲೆಗೆ ಖ್ಯಾತಿ ಹೊಂದಿದ್ದು, ಉತ್ಸವ ಸಂದರ್ಭದಲ್ಲಿ ಶಿಲ್ಪ ಕಲೆ ಶಿಬಿರ ಏರ್ಪಡಿಸಬೇಕು. ಗ್ರಾಮದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ, ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಐತಿಹಾಸಿಕ ಸ್ಮಾರಕಗಳಿಗೆ ಸೂಕ್ತ ರಕ್ಷಣೆ ಒದಗಿಸಬೇಕು, ಈ ಹಿಂದಿನ ಉತ್ಸವಗಳಲ್ಲಿ ಆದ ಲೋಪದೋಷಗಳು ಪುನರಾವರ್ತನೆಯಾಗದಂತೆ ಉತ್ಸವ ಅದ್ಧೂರಿಯಾಗಿ ಆಚರಣೆಯಾಬೇಕು ಎಂದು ಹಲವು ಗಣ್ಯರು, ಸಂಘಟನೆಗಳ ಪದಾಧಿಕಾರಿಗಳು ತಮ್ಮ ಅಭಿಪ್ರಾಯಗಳನ್ನು ಸಭೆಯಲ್ಲಿ ವ್ಯಕ್ತಪಡಿಸಿದರು.
ಸಭೆಯಲ್ಲಿ ಜಿ.ಪಂ. ಅಧ್ಯಕ್ಷ ಅಮರೇಶ್ ಕುಳಗಿ, ಗಂಗಾವತಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಹನುಮಂತಪ್ಪ ನಾಯಕ್, ತಾ.ಪಂ. ಅಧ್ಯಕ್ಷೆ ಈರಮ್ಮ ಮುದಿಯಪ್ಪ, ಆನೆಗೊಂದಿ ಗ್ರಾ.ಪಂ. ಅಧ್ಯಕ್ಷ ರಾಜೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಪಿ. ರಾಜಾ, ಉಪವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ್, ಜಿ.ಪಂ. ಉಪಕಾರ್ಯದರ್ಶಿ ಎನ್.ಕೆ. ತೊರವಿ, ತಹಸಿಲ್ದಾರ್ ವೆಂಕನಗೌಡ ಪಾಟೀಲ್, ಡಿವೈಎಸ್‌ಪಿ ವಿನ್ಸಂಟ್ ಶಾಂತಕುಮಾರ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ದೊಡ್ಡಪ್ಪ ದೇಸಾಯಿ, ಜಿ.ಪಂ. ಸದಸ್ಯ ವಿಜಯಲಕ್ಷ್ಮಿ ರಾಮಕೃಷ್ಣ, ತಾಲೂಕು ಕಸಾಪ ಅಧ್ಯಕ್ಷ ಅಜ್ಮೀರ್ ನಂದಾಪುರ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಮಾಧ್ಯಮದವರು ಅಲ್ಲದೆ ಸಾರ್ವಜನಿಕರು ಭಾಗವಹಿಸಿ, ಉತ್ಸವದ ಯಶಸ್ವಿಗೆ ಉಪಯುಕ್ತ ಸಲಹೆ ಸೂಚನೆ ನೀಡಿದರು.
0 comments:
Post a Comment