PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಮಾ. ೨೦  : ಆನೆಗೊಂದಿ ಉತ್ಸವವನ್ನು ಏ. ೧೧ ಮತ್ತು ೧೨ ರಂದು ಎರಡು ದಿನಗಳ ಕಾಲ ವಿಜೃಂಭಣೆಯಿಂದ ಆಚರಿಸಲು ಈಗಾಗಲೆ ನಿರ್ಧರಿಸಲಾಗಿದ್ದು, ಉತ್ಸವ ಆಚರಣೆಗೆ ಕೂಡಲೆ ಸಿದ್ಧತೆಗಳನ್ನು ಪ್ರಾರಂಭಿಸುವಂತೆ ಕೊಪ್ಪಳ ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
  ಆನೆಗೊಂದಿ ಉತ್ಸವ ಆಚರಣೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
  ಆನೆಗೊಂದಿ ಉತ್ಸವವನ್ನು ಏ. ೧೧ ಮತ್ತು ೧೨ ರಂದು ವಿಜೃಂಭಣೆಯಿಂದ ಆಚರಿಸಲು ಈಗಾಗಲೆ ದಿನಾಂಕ ನಿಗದಿಪಡಿಸಲಾಗಿದ್ದು, ಉತ್ಸವ ಆಚರಣೆಗೆ ಅಗತ್ಯ ಸಿದ್ಧತೆಗಳನ್ನು ಅಧಿಕಾರಿಗಳು ಕೂಡಲೆ ಪ್ರಾರಂಭಿಸಬೇಕು.  ಉತ್ಸವ ಆಚರಣೆಗೆ ಎರಡು ವೇದಿಕೆಗಳನ್ನು ನಿರ್ಮಿಸಲು ನಿರ್ಧಾರ ಕೈಗೊಳ್ಳಲಾಗಿದ್ದು, ಆನೆಗೊಂದಿ ಗ್ರಾಮದ ಹೊರವಲಯದಲ್ಲಿ ಒಂದು ಮುಖ್ಯ ವೇದಿಕೆ ಹಾಗೂ ಗ್ರಾಮದ ಶಾಲಾ ಆವರಣದಲ್ಲಿ ಇನ್ನೊಂದು ವೇದಿಕೆಯನ್ನು ನಿರ್ಮಿಸಬೇಕು.  ಉತ್ಸವದಲ್ಲಿ ಸ್ಥಳೀಯ ಕಲಾವಿದರಿಗೇ ಹೆಚ್ಚಿನ ಆದ್ಯತೆ ನೀಡಲು ತೀರ್ಮಾನಿಸಲಾಗಿದ್ದು, ಕನಕಗಿರಿ ಉತ್ಸವದಲ್ಲಿ ಕಾರ್ಯಕ್ರಮ ನೀಡಿದ ಕಲಾವಿದರನ್ನು ಹೊರತುಪಡಿಸಿ, ಇತರೆ ಕಲಾವಿದರಿಗೆ ಅವಕಾಶ ಕಲ್ಪಿಸಿಕೊಡಬೇಕು.  ವೇದಿಕೆ ನಿರ್ಮಾಣ, ಗ್ರಾಮದ ಸ್ವಚ್ಛತೆ, ಮಳಿಗೆಗಳ ನಿರ್ಮಾಣ, ಮಾಧ್ಯಮ ಕೇಂದ್ರ ಸ್ಥಾಪನೆ ಸೇರಿದಂತೆ ಕೈಗೊಳ್ಳಲಾಗುವ ಕಾಮಗಾರಿಗಳಿಗೆ ಕೂಡಲೆ ಟೆಂಡರ್ ಕರೆಯಲು ಕ್ರಮ ಜರುಗಿಸುವಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.  ಏ. ೧೧ ರಂದು ಆನೆಗೊಂದಿ ಗ್ರಾಮದಲ್ಲಿ ಶ್ರೀ ರಂಗನಾಥ ಸ್ವಾಮಿ ಜಾತ್ರಾ ಕಾರ್ಯಕ್ರಮಗಳು ಜರುಗುವುದರಿಂದ, ಅಂದು ಬೆಳಿಗ್ಗೆ ಮೆರವಣಿಗೆ ಕಾರ್ಯಕ್ರಮ ಹಾಗೂ ಸಂಜೆ ವೇದಿಕೆಗಳ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.  ಮೆರವಣಿಗೆಗೆ ವಿವಿಧ ಕಲಾ ತಂಡಗಳ ಆಯ್ಕೆಗೆ ಕೂಡಲೆ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಿದರು.  ಏ. ೧೨ ರಂದು ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು.  ಉತ್ಸವ ದಿನಗಳಲ್ಲಿ ಎಲ್ಲ ತಾಲೂಕುಗಳಿಂದಲೂ ನಿರಂತರವಾಗಿ ಬಸ್ ಸೌಲಭ್ಯ ಕಲ್ಪಿಸಬೇಕು.  ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.  ಉತ್ಸವದ ಯಶಸ್ವಿಗೆ ಹಲವು ಸಮಿತಿಗಳನ್ನು ರಚಿಸಲಾಗಿದ್ದು, ಅಧಿಕಾರಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.  
  ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಜಾ, ಅಪರ ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳ್, ಉಪವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಿದ್ದರು.

Advertisement

0 comments:

Post a Comment

 
Top