ಮೊದಲನೆ ಹಂತ : ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ವೇಳಪಟ್ಟಿ ಪ್ರಕಟಿಸಿದ್ದು, ರಾಜ್ಯದಲ್ಲಿ ೦೨ ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ರಾಜ್ಯದ ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಚಾಮರಾಜನಗರ, ಉಡುಪಿ, ಬೆಳಗಾವಿ, ವಿಜಯಪುರ, ಹಾವೇರಿ, ಬಾಗಲಕೋಟೆ, ಉತ್ತರಕನ್ನಡ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದ್ದು, ಮೇ. ೨೯ ರಂದು ಮತದಾನ ನಡೆಯಲಿದೆ. ಆಯಾ ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಮೇ. ೧೧ ರಂದು ಹೊರಡಿಸಲಿದ್ದು, ನಾಮಪತ್ರ ಸಲ್ಲಿಸಲು ಮೇ. ೧೮ ಕೊನೆಯ ದಿನಾಂಕವಾಗಿರುತ್ತದೆ. ನಾಮಪತ್ರಗಳ ಪರಿಶೀಲನೆ ಮೇ. ೧೯ ರಂದು ಜರುಗಲಿದ್ದು, ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಮೇ. ೨೧ ಕೊನೆಯ ದಿನವಾಗಿರುತ್ತದೆ. ಮತದಾನದ ಅವಶ್ಯವಿದ್ದರೆ ಮೇ. ೨೯ ರಂದು ಬೆಳಿಗ್ಗೆ ೭ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನದ ಅಗತ್ಯವಾದಲ್ಲಿ ಮೇ. ೩೧ ರಂದು ಮರು ಮತದಾನ ನಡೆಸಲಾಗುವುದು. ಮತಗಳ ಎಣಿಕೆ ಜೂ. ೦೫ ರಂದು ಬೆಳಿಗ್ಗೆ ೮ ಗಂಟೆಗೆ ಆಯಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ. ಚುನಾವಣೆ ಪ್ರಕ್ರಿಯೆ ಜೂ. ೦೬ ಕ್ಕೆ ಪೂರ್ಣಗೊಳಿಸಬೇಕಿದೆ.
ಎರಡನೆ ಹಂತ : ಎರಡನೆ ಹಂತದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ತುಮಕೂರು, ಬೀದರ್, ಬಳ್ಳಾರಿ, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಚುನಾವಣೆ ನಡೆಯಲಿದ್ದು ಜೂ. ೦೨ ರಂದು ಮತದಾನ ನಡೆಯಲಿದೆ. ಆಯಾ ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಮೇ. ೧೫ ರಂದು ಹೊರಡಿಸಲಿದ್ದು, ನಾಮಪತ್ರ ಸಲ್ಲಿಸಲು ಮೇ. ೨೨ ಕೊನೆಯ ದಿನಾಂಕವಾಗಿರುತ್ತದೆ. ನಾಮಪತ್ರಗಳ ಪರಿಶೀಲನೆ ಮೇ. ೨೩ ರಂದು ಜರುಗಲಿದ್ದು, ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಮೇ. ೨೫ ಕೊನೆಯ ದಿನವಾಗಿರುತ್ತದೆ. ಮತದಾನದ ಅವಶ್ಯವಿದ್ದರೆ ಜೂ. ೦೨ ರಂದು ಬೆಳಿಗ್ಗೆ ೭ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನದ ಅಗತ್ಯವಾದಲ್ಲಿ ಜೂ. ೦೪ ರಂದು ಮರು ಮತದಾನ ನಡೆಸಲಾಗುವುದು. ಮತಗಳ ಎಣಿಕೆ ಜೂ. ೦೫ ರಂದು ಬೆಳಿಗ್ಗೆ ೮ ಗಂಟೆಗೆ ಆಯಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದೆ. ಚುನಾವಣೆ ಪ್ರಕ್ರಿಯೆ ಜೂ. ೦೬ ಕ್ಕೆ ಪೂರ್ಣಗೊಳಿಸಬೇಕಿದೆ.
ನೀತಿ ಸಂಹಿತೆ : ಗ್ರಾಮ ಪಂಚಾಯತಿಗಳ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಸದಾಚಾರ ಸಂಹಿತೆಯು ಚುನಾವಣೆ ನಡೆಯುವ ಎಲ್ಲಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಯ ಪ್ರದೇಶಕ್ಕೆ ಮಾತ್ರ ಅನ್ವಯವಾಗಲಿದ್ದು, ಸದಾಚಾರ ಸಂಹಿತೆಯು ಮೇ. ೧೦ ರಂದು ಬೆ. ೦೮ ಗಂಟೆಯಿಂದ ಜೂ. ೦೭ ರವರೆಗೆ ಜಾರಿಯಲ್ಲಿರುತ್ತದೆ. ನೀತಿ ಸಂಹಿತೆಯು ಪಟ್ಟಣ ಪಂಚಾಯತಿ, ಪುರಸಭೆ, ನಗರಸಭೆ, ನಗರಪಾಲಿಕೆ, ಮಹಾನಗರ ಪಾಲಿಕೆಗಳ ವ್ಯಾಪ್ತಿಯ ಪ್ರದೇಶಗಳಿಗೆ ಅನ್ವಯವಾಗುವುದಿಲ್ಲ. ನೀತಿ ಸಂಹಿತೆಯನ್ವಯ ತಾ.ಪಂ. ಮತ್ತು ಜಿ.ಪಂ. ಸಾಮಾನ್ಯ ಸಭೆ ನಡೆಸಲು ಯಾವುದೇ ಅಡ್ಡಿ ಇಲ್ಲ. ಆದರೆ ಸಭೆಯಲ್ಲಿ ಯಾವುದೇ ಹೊಸ ಯೋಜನೆ ಅನುಷ್ಠಾನದ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಂತಿಲ್ಲ. ಈಗಾಗಲೆ ಆಯವ್ಯಯ ಒದಗಿಸಿರುವ ಯೋಜನೆಗಳನ್ನು ಪ್ರಾರಂಭಿಸಲು ಅಥವಾ ಪ್ರಾರಂಭವಾಗಿದ್ದಲ್ಲಿ ಕೆಲಸ ಮುಂದುವರೆಸಲು ಯಾವುದೇ ಬಾಧಕವಿಲ್ಲ. ಬರಪೀಡಿತ ಪ್ರದೇಶದಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಅಡ್ಡಿ ಇರುವುದಿಲ್ಲ. ಆದರೆ ಯೋಜನೆ ಅನುಷ್ಠಾನದ ಸಾರ್ವಜನಿಕ ಸಮಾರಂಭ ಅಥವಾ ರಾಜಕೀಯ ನಾಯಕರುಗಳ ಉಪಸ್ಥಿತಿಯಲ್ಲಿ ನಡೆಯುವಂತಿಲ್ಲ. ತಾ.ಪಂ. ಮತ್ತು ಜಿ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಅಲ್ಲದೆ ಎಪಿಎಂಸಿ ಅಧ್ಯಕ್ಷರಿಗೆ ಒದಗಿಸಿರುವ ಸರ್ಕಾರಿ ವಾಹನಗಳನ್ನು ಚುನಾವಣೆ ಮುಕ್ತಾಯವಾಗುವವರೆಗೆ ಜಿಲ್ಲಾಧಿಕಾರಿಗಳು ವಶದಲ್ಲಿರಿಸಿಕೊಳ್ಳಬೇಕು. ಗ್ರಾ.ಪಂ. ಚುನಾವಣೆಗಳು ಪಕ್ಷ ರಹಿತವಾಗಿ ನಡೆಯುವುದರಿಂದ ರಾಜಕೀಯ ಪಕ್ಷಗಳ ಚಿಹ್ನೆಗಳನ್ನು ಮತ್ತು ರಾಜಕೀಯ ಮುಖಂಡರ ಭಾವಚಿತ್ರಗಳನ್ನು ಉಪಯೋಗಿಸಿ ಪ್ರಚಾರ ಮಾಡಬಾರದು. ಒಂದು ವೇಳೆ ಅಂತಹ ಪ್ರಚಾರ ನಡೆಸಿದಲ್ಲಿ, ಅಭ್ಯರ್ಥಿ ಮುದ್ರಿಸಿರುವ ಕರಪತ್ರ, ಇತರೆ ಪ್ರಚಾರ ಸಾಮಗ್ರಿಗಳನ್ನು ಮುಟ್ಟುಗೋಲು ಹಾಕಲಾಗುವುದು. ಯಾವುದೇ ಸಾಂಸ್ಕೃತಿಕ ಹಾಗೂ ಧಾರ್ಮಿಕ ಸಭೆ ಮತ್ತು ಸಮಾರಂಭಗಳನ್ನು ನಡೆಸಲು ನೀತಿ ಸಂಹಿತೆಯ ಅಡ್ಡಿ ಇಲ್ಲ. ಆದರೆ ಇಂತಹ ಸಭೆ, ಸಮಾರಂಭಗಳಲ್ಲಿ ರಾಜಕೀಯ ವ್ಯಕ್ತಿಗಳು ಭಾಗವಹಿಸಿ ನೀತಿ ಸಂಹಿತೆಗೆ ಬಾಧಕವಾಗುವ ರೀತಿಯಲ್ಲಿ ಮತದಾರರ ಮೇಲೆ ಪರಿಣಾಮ ಬೀರುವಂತಹ ಯಾವುದೇ ಘೋಷಣೆ, ಹೇಳಿಕೆ ಅಥವಾ ಆಶ್ವಾಸನೆ ಇತ್ಯಾದಿ ಮಾಡುವಂತಿಲ್ಲ. ಜಿಲ್ಲಾ, ತಾಲೂಕು ಮಟ್ಟದಲ್ಲಿ ಪಡಿತರ ಚೀಟಿ ವಿತರಣೆ, ಗ್ರಾಮೀಣ ಭಾಗಗಳಿಗೆ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನದಂತಹ ವಿಷಯಗಳಲ್ಲಿ ತೀರ್ಮಾನ ತೆಗೆದುಕೊಳ್ಳವ ಸಭೆಗಳನ್ನು ಸಚಿವರು, ಶಾಸಕರು ಮತ್ತು ಅಧಿಕಾರಿಗಳು ನಡೆಸುವಂತಿಲ್ಲ. ಒಟ್ಟಾರೆ ಮತದಾರರ ಮೇಲೆ ಪ್ರಭಾವ ಬೀರುವಂತಹ ಯಾವುದೇ ಸರ್ಕಾರಿ ಕಾರ್ಯಕ್ರಮ ಅಥವಾ ಯೋಜನೆಯು ನಡೆಯದಂತೆ ಸಂಬಂಧಪಟ್ಟ ಅಧಿಕಾರಿಗಳು ನಿಗಾ ವಹಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಆರ್. ಚಂದ್ರಶೇಖರ್ ಅವರು ತಿಳಿಸಿದ್ದಾರೆ.
0 comments:
Post a Comment