PLEASE LOGIN TO KANNADANET.COM FOR REGULAR NEWS-UPDATES

ಕೊಪ್ಪಳ ಆ. ೨೭ (ಕ.ವಾ) ಈ ಬಾರಿಯ ಶ್ರೀ ಕೃಷ್ಣ ಜಯಂತಿಯನ್ನು ಸೆ. ೦೫ ರಂದು ಸರ್ಕಾರಿ ಕಾರ್ಯಕ್ರಮವನ್ನಾಗಿ ವಿಜೃಂಭಣೆಯಿಂದ ಆಚರಿಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗುವುದು ಎಂದು  ಜಿಲ್ಲಾಧಿಕಾರಿ ರಮಣದೀಪ್ ಚೌದರಿ ಅವರು ಹೇಳಿದರು.
     ಕೃಷ್ಣ ಜಯಂತಿಯನ್ನು ಆಚರಿಸುವ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
     ಕೃಷ್ಣ ಜಯಂತಿಯನ್ನು  ಸರ್ಕಾರಿ ಕಾರ್ಯಕ್ರಮವನ್ನಾಗಿ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಆಚರಿಸಲು ಸರ್ಕಾರ ಆದೇಶ ಹೊರಡಿಸಿದೆ.  ದೇಶದ ಎಲ್ಲ ಸಮುದಾಯದವರೂ ಶ್ರೀ ಕೃಷ್ಣನ ಆರಾಧಕರಾಗಿದ್ದು, ಯಾವುದೇ ಒಂದು ಸಮುದಾಯಕ್ಕೆ ಶ್ರೀ ಕೃಷ್ಣನನ್ನು ಸೀಮಿತಗೊಳಿಸುವುದು ಸಮಂಜಸವಲ್ಲ. ಕೃಷ್ಣ ಜಯಂತಿಯನ್ನು ಎಲ್ಲ ಸಮುದಾಯದವರ, ಸಂಘಟನೆಗಳ, ಸಾರ್ವಜನಿಕರ ಸಹಭಾಗಿತ್ವದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುವುದು.  ಸೆ. ೦೫ ರಂದು ಶಿಕ್ಷಕರ ದಿನಾಚರಣೆಯೂ ಇರುವುದರಿಂದ, ಶ್ರೀ ಕೃಷ್ಣ ಜಯಂತಿ ಕುರಿತ ಮೆರವಣೆಗೆ ಅಂದು ಬೆಳಗಿನ ವೇಳೆಯ ಬದಲಿಗೆ ಮಧ್ಯಾಹ್ನ ೩-೩೦ ಗಂಟೆಗೆ ಕೊಪ್ಪಳದ ಶಿರಸಪ್ಪಯ್ಯನ ಮಠ ಬಳಿ ಇರುವ ಗೋಪಾಲಕೃಷ್ಣ ದೇವಸ್ಥಾನದಿಂದ ಹೊರಟು, ಗಡಿಯಾರ ಕಂಬ, ಜವಾಹರ ರಸ್ತೆ ಮೂಲಕ ಸಾಹಿತ್ಯ ಭವನ ತಲುಪುವುದು.  ಸಂಜೆ ೬ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಸಮಾರಂಭ ಏರ್ಪಡಿಸಲಾಗುವುದು. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಪಾಲ್ಗೊಂಡು ಮೆರವಣಿಗೆಯನ್ನು ಆಕರ್ಷಕಗೊಳಿಸಲಿದೆ.  ಶಿಷ್ಠಾಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರುಗಳು, ಸಂಸದರು ಹಾಗೂ ವಿವಿಧ ಗಣ್ಯರನ್ನು ಸಮಾರಂಭಕ್ಕೆ ಆಹ್ವಾನಿಸಲಾಗುವುದು.  ಕಾರ್ಯಕ್ರಮದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿ, ಸಿಬ್ಬಂದಿಗಳು ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ರಮಣದೀಪ ಚೌದರಿ ಅವರು ಸೂಚನೆ ನೀಡಿದರು.
     ಸಭೆಯಲ್ಲಿ ಹಾಜರಿದ್ದ ಅಪರ ಜಿಲ್ಲಾಧಿಕಾರಿ ಡಾ. ಪ್ರವೀಣ್ ಕುಮಾರ ಜಿ.ಎಲ್. ಅವರು ಮಾತನಾಡಿ, ಶ್ರೀಕೃಷ್ಣ ಜಯಂತಿ ಆಚರಣೆಗೆ ಜಿಲ್ಲಾ ಮಟ್ಟದಲ್ಲಿ ೫೦ ಸಾವಿರ ರೂ. ಹಾಗೂ ತಾಲೂಕು ಮಟ್ಟದಲ್ಲಿ ೨೫ ಸಾವಿರ ರೂ. ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ.  ಅಲ್ಲದೆ ತಾಲೂಕು ಮಟ್ಟದಲ್ಲಿಯೂ ವಿಜೃಂಭಣೆಯಿಂದ ಆಚರಿಸಲು ಈಗಾಗಲೆ ಸಂಬಂಧಪಟ್ಟ ತಹಸಿಲ್ದಾರರಿಗೆ ಸೂಚನೆ ನೀಡಲಾಗಿದೆ.  ಸಮಾರಂಭದಲ್ಲಿ ವಿಶೇಷ ಉಪನ್ಯಾಸ ನೀಡಲು ಸೂಕ್ತ ಗಣ್ಯರನ್ನು ಆಹ್ವಾನಿಸಲಾಗುವುದು ಎಂದರು.   
      ಮೆರವಣಿಗೆ ಸಂದರ್ಭದಲ್ಲಿ ರಸ್ತೆ ಸ್ವಚ್ಛತೆ ಹಾಗೂ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ, ವೇದಿಕೆ ಅಲಂಕಾರ, ಮೆರವಣಿಗೆ ವ್ಯವಸ್ಥೆ ಹಾಗೂ ಸಮರ್ಪಕ ಪೊಲೀಸ್ ಬಂದೋಬಸ್ತ್ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಸೂಚನೆ ನೀಡಲಾಯಿತು.     ಸಭೆಯಲ್ಲಿ ಭಾಗವಹಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರಪ್ಪ ಚೋರನೂರ ಅವರು ಮಾತನಾಡಿ, ಕೃಷ್ಣ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸುವಂತಾಗಲು ಇಲಾಖೆಯಿಂದ ಮೆರವಣಿಗೆಗೆ ಸಾಂಸ್ಕೃತಿಕ ಕಲಾ ತಂಡವನ್ನು ಒದಗಿಸಲಾಗುವುದು ಎಂದರು.  
     ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ, ಉಪವಿಭಾಗಾಧಿಕಾರಿ ಪಿ.ಎಸ್. ಮಂಜುನಾಥ್, ಡಿವೈಎಸ್‌ಪಿ ರಾಜೀವ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಯಾದವ ಸಮಾಜದ ಮುಖಂಡರಾದ ವೆಂಕಣ್ಣ ಯಾದವ್, ರವಿ ಕುರುಗೋಡ್ ಅಲ್ಲದೆ ಶಿವಾನಂದ ಹೊದ್ಲೂರ್, ಮಂಜುನಾಥ ಗೊಂಡಬಾಳ್, ಮಹಾಂತೇಶ್ ಮಲ್ಲನಗೌಡರ ಹಾಗೂ ವಿವಿಧ ಗಣ್ಯರು ಉಪಸ್ಥಿತರಿದ್ದು, ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.

Advertisement

0 comments:

Post a Comment

 
Top