ಕೊಪ್ಪಳ, ಆ.೨೭ (ಕ ವಾ) ಪ್ರಸಕ್ತ ಸಾಲಿನ ಐ.ಎ.ಎಸ್, ಕೆ.ಎ.ಎಸ್ ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆ.೩೦ ರಂದು ನಡೆಯಲಿರುವ ಪರೀಕ್ಷೆಯನ್ನು ಸುಗಮ ಹಾಗೂ ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ರಮಣದೀಪ್ ಚೌದರಿ ಅವರು ಆದೇಶ ಹೊರಡಿಸಿದ್ದಾರೆ.
ಸ್ಪರ್ಧಾತ್ಮಕ ಪರೀಕ್ಷೆಗಳು ಕೊಪ್ಪಳದ ಎಸ್.ಎಫ್.ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರಥಮ ದರ್ಜೆ ಪದವಿ ಕಾಲೇಜು, ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಸೇರಿದಂತೆ ಜಿಲ್ಲೆಯ ಒಟ್ಟು ೦೫ ಪರೀಕ್ಷಾ ಕೇಂದ್ರಗಳಲ್ಲಿ ಆ.೩೦ ರಂದು ಬೆಳಿಗ್ಗೆ ೦೯ ಗಂಟೆಯಿಂದ ಸಂಜೆ ೦೫ ಗಂಟೆಯವರೆಗೆ ನಡೆಯಲಿದೆ. ಪರೀಕ್ಷೆ ಸುಗಮ ಹಾಗೂ ಶಾಂತಿಯುತವಾಗಿ ನಡೆಯಲು ಅನುವಾಗುವಂತೆ ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀಟರ್ ವ್ಯಾಪ್ತಿಯಲ್ಲಿ ಭಾರತೀಯ ದಂಡ ಪ್ರಕ್ರಿಯೆ ಸಂಹಿತೆ ೧೯೮೩ ರ ಕಲಂ ೧೪೪ ರನ್ವಯ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ.
ನಿಷೇಧಾಜ್ಞೆಯನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀ. ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್, ಝೆರಾಕ್ಸ್, ಟೈಪಿಂಗ್‌ಗೆ ನಿರ್ಬಂಧವಿದೆ ಹಾಗೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಲಾಗಿದೆ. ಈ ಆದೇಶವು ಮದುವೆ, ಶವ ಸಂಸ್ಕಾರ ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ರಮಣದೀಪ್ ಚೌದರಿ ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ
ಕೊಪ್ಪಳ ಆ. ೨೭ (ಕ ವಾ)ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಸಣ್ಣ ನೀರಾವರಿ ಸಚಿವ ಶಿವರಾಜ ಎಸ್ ತಂಗಡಗಿ ಅವರು ಆ. ೨೮ ರಿಂದ ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಆ. ೨೮ ರಂದು ಬೆಂಗಳೂರಿನಿಂದ ಹೊರಟು ಮಧ್ಯಾಹ್ನ ೩ ಗಂಟೆಗೆ ಜಿಲ್ಲೆಯ ಕಾರಟಗಿಗೆ ಆಗಮಿಸುವರು. ನಂತರ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ, ವಾಸ್ತವ್ಯ ಮಾಡುವರು. ಆ. ೨೯ ರಂದು ಬೆಳಿಗ್ಗೆ ೧೧-೩೦ ಗಂಟೆಗೆ ಕೊಪ್ಪಳಕ್ಕೆ ಆಗಮಿಸಿ, ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಏರ್ಪಡಿಸಲಾಗಿರುವ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವರು. ಅಂದು ಸಂಜೆ ೬ ಗಂಟೆಗೆ ಕಾರಟಗಿಗೆ ತೆರಳಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ಕೈಗೊಂಡು ವಾಸ್ತವ್ಯ ಮಾಡುವರು. ಸಚಿವರು ಆ. ೩೦ ರಂದು ಕಾರಟಗಿಯಲ್ಲಿ ಸಾರ್ವಜನಿಕ ಕುಂದುಕೊರತೆಗಳ ವಿಚಾರಣೆ ನಡೆಸಿ, ಮಧ್ಯಾಹ್ನ ೩ ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.
0 comments:
Post a Comment