ಸರ್ಕಾರಿ ನೌಕರರು ಒತ್ತಡದಲ್ಲೇ ಕಾರ್ಯ ನಿರ್ವಹಿಸುವ ಪರಿಸ್ಥಿತಿ ಇದ್ದು, ನೌಕರರ ದೈಹಿಕ
ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಅತ್ಯಂತ ಅಗತ್ಯವಾಗಿದೆ ಎಂದು ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು.
ಕೊಪ್ಪಳ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ಕೆ.ಪಿ. ಮೋಹನ್‌ರಾಜ್ ಅವರು ಮಾತನಾಡಿ, ಸರ್ಕಾರಿ ನೌಕರರಿಗೆ ಕರ್ತವ್ಯ ನಿರ್ವಹಣೆಯ ಜೊತೆಗೆ ತಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಸಹ ಅಷ್ಟೇ ಮುಖ್ಯವಾಗಿದೆ. ಸಾರ್ವಜನಿಕರಿಗೆ ಸರ್ಕಾರದ ಸೇವೆಗಳು ನಿಗದಿತ ಕಾಲಮಿತಿಯೊಳಗೆ ಲಭಿಸಬೇಕೆನ್ನುವ ಉದ್ದೇಶದಿಂದ ಸಕಾಲದಂತಹ ಯೋಜನೆಯನ್ನು ಜಾರಿಗೊಳಿಸಲಾಗಿರುವುದರಿಂದ, ಸರ್ಕಾರಿ ನೌಕರರಿಗೆ ಉತ್ತಮ ಸೇವೆ ನೀಡುವ ಬದ್ಧತೆಯೂ ಹೆಚ್ಚಾಗಿರುತ್ತದೆ. ಸರ್ಕಾರಿ ನೌಕರರು ಒತ್ತಡದ ನಡುವೆ ಕಾರ್ಯ ನಿರ್ವಹಿಸುವ ಪರಿಸ್ಥಿತಿ ಇರುವುದರಿಂದ, ಒತ್ತಡ ನಿವಾರಣೆ ನಿಟ್ಟಿನಲ್ಲಿ ದೈಹಿಕ ಮತ್ತು ಮಾನಿಸಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಅಥವಾ ಯೋಗ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಉತ್ತಮ. ಇತ್ತೀಚೆಗೆ ಸೇವೆಯಲ್ಲಿರುವಾಗಲೇ ಮೃತಪಡುವ ನೌಕರರ ಸಂಖ್ಯೆ ಹೆಚ್ಚಾಗುತ್ತಿದೆ. ಇದಕ್ಕೆ ಒತ್ತಡದ ಜೀವನ, ಅನಾರೋಗ್ಯ ಸೇರಿದಂತೆ ಹಲವು ಕಾರಣಗಳಿರಬಹುದಾಗಿದ್ದು, ನೌಕರರು ತಮ್ಮ ಕರ್ತವ್ಯ ಬದ್ಧತೆಯ ಜೊತೆಗೆ ಆರೋಗ್ಯವನ್ನು ಸದೃಢವಾಗಿಟ್ಟುಕೊಳ್ಳುವುದು ಅತ್ಯಂತ ಅವಶ್ಯವಾಗಿದೆ. ಕ್ರೀಡಾಕೂಟಗಳು ಸರ್ಕಾರಿ ನೌಕರರ ನಡುವೆ ಸಾಮರಸ್ಯ ಮತ್ತು ಬಾಂಧವ್ಯ ವೃದ್ಧಿಗೆ ಸಹಕಾರಿಯಾಗಿವೆ ಎಂದರು.
ಜಿಲ್ಲಾ ಪಂಚಾಯತಿ ಅಧ್ಯಕ್ಷ ಜನಾರ್ಧನ ಹುಲಿಗಿ ಅವರು ಈ ಸಂದರ್ಭದಲ್ಲಿ ಮಾತನಾಡಿ, ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವಿಕೆ ಅತ್ಯಂತ ಮಹತ್ವದ್ದಾಗಿದೆ ಎಂದರು.
ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾಗರಾಜ ಜುಮ್ಮನ್ನವರ್ ಅವರು ಪ್ರಾಸ್ತಾವಿಕ ಭಾಷಣ ಮಾಡಿದರು. ನಗರಸಭೆ ಅಧ್ಯಕ್ಷೆ ಲತಾ ವೀರಣ್ಣ ಸಂಡೂರ, ಉಪಾಧ್ಯಕ್ಷ ಅಮ್ಜದ್ ಪಟೇಲ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಡಿ ಉದಪುಡಿ, ತಾ.ಪಂ. ಅಧ್ಯಕ್ಷ ಮುದೇಗೌಡ ಮಾಲಿಪಾಟೀಲ್, ಡಿಹೆಚ್‌ಓ ಡಾ. ಮಹಾದೇವಸ್ವಾಮಿ, ಡಿಡಿಪಿಐ ಜಿ.ಹೆಚ್. ವೀರಣ್ಣ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನರಾವ್ ಸೇರಿದಂತೆ ಹಲವಾರು ಗಣ್ಯರು ಅಧಿಕಾರಿಗಳು ಉಪಸ್ಥಿತರಿದ್ದರು. ನೌಕರರ ಸಂಘದ ಕಾರ್ಯದರ್ಶಿ ಶಿವಪ್ಪ ಜೋಗಿನ್ ಪ್ರಾರಂಭದಲ್ಲಿ ಸ್ವಾಗತಿಸಿದರು. ಕ್ರೀಡಾಕೂಟದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳ ಸರ್ಕಾರಿ ನೌಕರರು ಪಾಲ್ಗೊಂಡಿದ್ದರು. ೪೫ ವರ್ಷ ವಯೋಮಿತಿಯೊಳಗಿನ ಪುರುಷ ಮತ್ತು ಮಹಿಳಾ ನೌಕರರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.
0 comments:
Post a Comment
Click to see the code!
To insert emoticon you must added at least one space before the code.