ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ನಿಟ್ಟಿನಲ್ಲಿ ಸದ್ಯ ಕುಡಿಯುವ ನೀರು ಸರಬರಾಜು ಮಾಡಲು ಇರುವ ವ್ಯವಸ್ಥೆ ಹಾಗೂ ಕೊರತೆ ಕುರಿತಂತೆ ಪ್ರತಿ ಗ್ರಾಮವಾರು ಸಮಗ್ರ ವಿವರಗಳನ್ನು ಕೂಡಲೆ ಸಿದ್ಧಪಡಿಸಿ ಸಲ್ಲಿಸುವಂತೆ ಜಿಲ್ಲಾ ಪಂಚಾಯತಿ ಅಧ್ಯಕ್ಷ ಜನಾರ್ಧನ ಹುಲಿಗಿ ಅವರು
ಪಂಚಾಯತಿ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.
ಅಸಮಾಧಾನ : ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಮಹತ್ವದ ವಿಷಯವಾಗಿದ್ದು, ಪಂಚಾಯತಿ ರಾಜ್ ಇಂಜಿನಿಯರಿಂಗ್ ವಿಭಾಗಕ್ಕೆ ಕಳೆದ ಸಾಲಿನಲ್ಲಿ ಹಾಗೂ ಪ್ರಸಕ್ತವಾಗಿ ಸರ್ಕಾರ ಬಿಡುಗಡೆ ಮಾಡಿರುವ ಅನುದಾನ, ಖರ್ಚಾದ ಅನುದಾನ, ಕಾಮಗಾರಿಗಳ ವಿವರ, ಕಾಮಗಾರಿಗಳ ಸ್ಥಿತಿ-ಗತಿಗಳ ಬಗ್ಗೆ ಸಭೆಗೆ ಸಮರ್ಪಕ ಮಾಹಿತಿ ನೀಡಲು ವಿಫಲರಾದ ಕಾರ್ಯಪಾಲಕ ಅಭಿಯಂತರ ಇಸ್ಮಾಯಿಲ್ ಖಾನ್ ಅವರ ಕಾರ್ಯವೈಖರಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿ.ಪಂ. ಅಧ್ಯಕ್ಷರು, ಮುಂದಿನ ದಿನಗಳಲ್ಲಿ, ಸಭೆಗೆ ಸಮರ್ಪಕ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ಎಚ್ಚರಿಕೆ ನೀಡಿದರು.
ಹುದ್ದೆಗಳ ಭರ್ತಿ ಕೋರಿ ಸರ್ಕಾರಕ್ಕೆ ಮನವಿ : ಜಿಲ್ಲಾ ಪಂಚಾಯತಿ ವ್ಯಾಪ್ತಿಯ ವಿವಿಧ ಇಲಾಖೆಗಳ ಮೂಲಕ ಸರ್ಕಾರದ ಹಲವಾರು ಮಹತ್ವಾಕಾಂಕ್ಷಿ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಆದರೆ ವಿವಿಧ ಇಲಾಖೆಗಳಲ್ಲಿ ಬಹಳಷ್ಟು ಹುದ್ದೆಗಳು ಖಾಲಿ ಇರುವುದಾಗಿ ತಿಳಿದುಬಂದಿದೆ. ಹುದ್ದೆಗಳ ಕೊರತೆಯಿಂದ ಮಹತ್ವದ ಯೋಜನೆಗಳ ಅನುಷ್ಠಾನದಲ್ಲಿ ಬಹಳಷ್ಟು ತೊಂದರೆ ಉಂಟಾಗಿರುವುದರಿಂದ, ಯೋಜನೆಗಳ ಸಮರ್ಪಕ ಜಾರಿ ಸಾಧ್ಯವಾಗುತ್ತಿಲ್ಲ. ಈಗಾಗಲೆ ಹೈದ್ರಾಬಾದ್-ಕರ್ನಾಟಕ ಪ್ರದೇಶಕ್ಕೆ ೩೭೧ (ಜೆ) ತಿದ್ದುಪಡಿಯ ಮೀಸಲಾತಿ ಸೌಲಭ್ಯ ದೊರೆಯಲು ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯಲ್ಲಿ ೫೧೯೪ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ಮಂಜೂರಾತಿ ಇದ್ದು, ೧೧೮೨ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಇದೇ ರೀತಿ ಎಲ್ಲ ಇಲಾಖೆಗಳಿಂದ ಮಾಹಿತಿ ಸಂಗ್ರಹಿಸಿ, ಈ ಭಾಗದಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರಕ್ಕೆ ಸಮಗ್ರ ವಿವರಗಳೊಂದಿಗೆ ಮನವಿ ಸಲ್ಲಿಸಲಾಗುವುದು ಎಂದರು.
ತೋಟಗಾರಿಕೆ ಪ್ರದೇಶ ವಿಸ್ತರಣೆಗೆ ಸೂಚನೆ : ಜಿಲ್ಲೆಯಲ್ಲಿ ೨೦೧೩-೧೪ ನೇ ಸಾಲಿನಲ್ಲಿ ತೋಟಗಾರಿಕೆ ಪ್ರದೇಶ ವಿಸ್ತರಣೆಗೆ ಹಲವಾರು ವ್ಯಾಪಕ ಕ್ರಮಗಳನ್ನು ಕೈಗೊಳ್ಳುವಂತೆ ತೋಟಗಾರಿಕೆ ಇಲಾಖೆಗೆ ಸೂಚನೆ ನೀಡಲಾಗಿತ್ತು. ಅಲ್ಲದೆ ಉದ್ಯೋಗಖಾತ್ರಿ ಯೋಜನೆಯನ್ನು ಇಲಾಖೆಯ ಕಾರ್ಯಕ್ರಮಗಳಲ್ಲಿ ಕನ್ವರ್ಜೆನ್ಸ್ ಮಾಡುವ ಮೂಲಕ ಮಾನವ ದಿನಗಳನ್ನು ಸೃಜಿಸಿ, ತೋಟಗಾರಿಕೆ ಬೆಳೆ ಬೆಳೆಯಬಯಸುವ ರೈತರಿಗೆ ಸಸಿಗಳ ವಿತರಣೆ ಹಾಗೂ ಗಿಡಗಳನ್ನು ನೆಡಲು ಯೋಜನೆ ರೂಪಿಸಲಾಗಿತ್ತು. ಆದರೆ ೨೦೧೩-೧೪ನೇ ಸಾಲಿನಲ್ಲಿ ಬೇಡಿಕೆಗೆ ಅನುಗುಣವಾಗಿ ಸಸಿಗಳ ವಿತರಣೆ ಆಗದೇ ಇರುವುದರಿಂದ, ಯೊಜನೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಂಡಿಲ್ಲ. ಪ್ರಸಕ್ತ ಸಾಲಿನಲ್ಲಿಯಾದರೂ, ಈ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಿ, ಜಿಲ್ಲೆಯಲ್ಲಿ ತೋಟಗಾರಿಕೆ ಪ್ರದೇಶ ವಿಸ್ತರಣೆ ಮಾಡಲು ಅಗತ್ಯ ಯೋಜನೆ ರೂಪಿಸುವಂತೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕರಿಗೆ ಜಿ.ಪಂ. ಅಧ್ಯಕ್ಷರು ಸೂಚನೆ ನೀಡಿದರು.
ಶೌಚಾಲಯದಲ್ಲಿ ಕೊಪ್ಪಳ ಜಿಲ್ಲೆ ಪ್ರಥಮ ಸ್ಥಾನ : ನಿರ್ಮಲ ಭಾರತ ಅಭಿಯಾನ ಯೋಜನೆಯಡಿ ಜಿಲ್ಲೆಯಲ್ಲಿ ೨೦೧೩-೧೪ ನೇ ಸಾಲಿನಲ್ಲಿ ೧ ಲಕ್ಷ ಶೌಚಾಲಯ ನಿರ್ಮಿಸುವ ಗುರಿ ಹೊಂದಲಾಗಿತ್ತು. ಇದುವರೆಗೂ ಜಿಲ್ಲೆಯಲ್ಲಿ ೫೪೦೦೦ ಕ್ಕೂ ಹೆಚ್ಚು ಶೌಚಾಲಯಗಳನ್ನು ನಿರ್ಮಿಸುವ ಮೂಲಕ ಕೊಪ್ಪಳ ಜಿಲ್ಲೆ ಇಡೀ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಇದಕ್ಕಾಗಿ ಶ್ರಮಿಸಿದ ಎಲ್ಲ ಅಧಿಕಾರಿಗಳು ಅಭಿನಂದನಾರ್ಹರು. ಶೌಚಾಲಯ ನಿರ್ಮಾಣದ ಉಳಿದ ಗುರಿ ಸಾಧನೆಗೆ ಜಾಗೃತಿ ಅಭಿಯಾನವನ್ನು ಇದೇ ವೇಗದಲ್ಲಿ ಮುಂದುವರೆಸಲಾಗುವುದು. ಈಗಾಗಲೆ ಜಿಲ್ಲೆಯಲ್ಲಿ ವಿಸಿಲ್ ಅಭಿಯಾನವನ್ನು ಪ್ರಾರಂಭಿಸಲಾಗಿದ್ದು, ಯಾವುದೇ ಕಾರಣಕ್ಕೂ ಈ ಅಭಿಯಾನವನ್ನು ನಿಲ್ಲಿಸುವುದಿಲ್ಲ. ಇನ್ನಷ್ಟು ತೀವ್ರಗೊಳಿಸಲು ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿ.ಪಂ. ಅಧ್ಯಕ್ಷ ಜನಾರ್ಧನ ಹುಲಿಗಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ ಉದಪುಡಿ, ಜಿ.ಪಂ. ಉಪಾಧ್ಯಕ್ಷೆ ಅನ್ನಪೂರ್ಣ ಕಂದಕೂರಪ್ಪ, ಸಾಮಾನ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ತೋಟದ, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ವಿನಯಕುಮಾರ್ ಮೇಲಿನಮನಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಅಮರೇಶ್ ಕುಳಗಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾ.ಪಂ. ಕಾರ್ಯನಿವಾರ್ಹಕ ಅಧಿಕಾರಿಗಳು ಭಾಗವಹಿಸಿದ್ದರು.
0 comments:
Post a Comment
Click to see the code!
To insert emoticon you must added at least one space before the code.