PLEASE LOGIN TO KANNADANET.COM FOR REGULAR NEWS-UPDATES

 ಜಾತಿವಾರು ಆರ್ಥಿಕ ಮತ್ತು ಸಾಮಾಜಿಕ ಜನಗಣತಿ ಕಾರ್ಯವನ್ನು ಮುಂದಿನ ಅಕ್ಟೋಬರ್ ವೇಳೆಗೆ ಆರಂಭಿಸಲಾಗುವುದು. ಈಗಾಗಲೆ ಜನಗಣತಿ ಕಾರ್ಯಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ನಾಯಕ್‌ರನ್ನು ವಿಶೇಷ ಅಧಿಕಾರಿಯನ್ನಾಗಿ ನೇಮಕ ಮಾಡಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಆಯೋಗಕ್ಕೆ ಒಂದು ತಿಂಗಳೊಳಗೆ ಖಾಯಂ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು. ಈ ಸಂಬಂಧ ಮುಖ್ಯಮಂತ್ರಿಗೆ ಪತ್ರ ಬರೆದು ಮೂವರ ಹೆಸರುಗಳನ್ನು ಶಿಫಾರಸು ಮಾಡುವುದಾಗಿ ತಿಳಿಸಿದರು.
 ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ ಬೇರೆ ಕಾರ್ಯಕ್ಕಾಗಿ ಶಿಕ್ಷಕರನ್ನು ಬಳಸಿಕೊಳ್ಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ, ರಜಾ ಅವಧಿಯಲ್ಲಿ ಜಾತಿವಾರು ಜನಗಣತಿ ಕಾರ್ಯಕ್ಕಾಗಿ ಶಿಕ್ಷಕರನ್ನು ಬಳಸಿಕೊಳ್ಳುವ ಸಂಬಂಧ ಚಿಂತನೆ ನಡೆದಿದ್ದು, ಕಾನೂನು ತಜ್ಞರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಇದಲ್ಲದೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಲೆಕ್ಕಿಗ, ಪಂಚಾಯತ್ ಕಾರ್ಯದರ್ಶಿಗಳನ್ನು ಜಾತಿವಾರು ಜನಗಣತಿ ಕಾರ್ಯಕ್ಕೆ ಬಳಸಿಕೊಳ್ಳಲಾಗುವುದು ಎಂದು ಅವರು ಹೇಳಿದರು.
ಬೆಳಗಾವಿ ಜಿಲ್ಲೆಯ ಕುಡಚಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ಶಾಲೆ ಯಲ್ಲಿ 250 ಮಕ್ಕಳಿದ್ದು, ಕೇವಲ ಐದು ಶೌಚಾಲಯಗಳಿವೆ. ಮೂಲಭೂತ ಸೌಕರ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿ ನಿರ್ಮಾಣ ವಾಗಿದೆ. ಆದುದರಿಂದ, ಅಗತ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳಿಗೆ ಒಂದು ಶಾಲೆಯಲ್ಲಿ ಪ್ರವೇಶ ನೀಡದಂತೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಳವಾಗಿದ್ದರೆ, ಸ್ಥಳೀಯವಾಗಿ ಕಟ್ಟಡವನ್ನು ಬಾಡಿಗೆಗೆ ಪಡೆದು ಅವರಿಗೆ ಪ್ರವೇಶ ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿನ ಯಾವುದೇ ಮೊರಾರ್ಜಿ ದೇಸಾಯಿ ಶಾಲೆಗಳನ್ನು ಮುಚ್ಚುವುದಿಲ್ಲ. ಆದುದರಿಂದ, ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಒಟ್ಟು 720 ಹೋಬಳಿಗಳಿದ್ದು, ಈ ಪೈಕಿ ಕನಿಷ್ಠ 620 ಹೋಬಳಿಗಳಲ್ಲಿ ವಸತಿ ಶಾಲೆಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ. ಒಂದು ಶಾಲೆಗೆ ಸುಮಾರು 10 ಎಕರೆ ಭೂಮಿ ಹಾಗೂ ಶಾಲಾ ಕೊಠಡಿಗಳು, ವಸತಿ ಕಟ್ಟಡಗಳು, ಆಟದ ಮೈದಾನ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಒದಗಿಸಲು 12 ಕೋಟಿ ರೂ.ಗಳ ಅಗತ್ಯವಿದೆ ಎಂದು ಅವರು ತಿಳಿಸಿದರು.
ವಸತಿ ಶಾಲೆಗಳ ನಿರ್ಮಾಣಕ್ಕೆ ಅಗತ್ಯವಿರುವ ಸರಕಾರಿ ಭೂಮಿಯನ್ನು ಗುರುತಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಲ್ಲದೆ, ಭೂಮಿ ಲಭ್ಯವಿಲ್ಲದಿರುವ ಪ್ರದೇಶಗಳಲ್ಲಿ ರೈತರಿಂದ ಮಾರುಕಟ್ಟೆ ದರದ ಆಧಾರದ ಮೇಲೆ ಭೂಮಿ ಖರೀದಿಸುವ ಸಂಬಂಧ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ ಎಂದು ಅವರು ಹೇಳಿದರು.
ನಗರ ಪ್ರದೇಶಗಳಲ್ಲಿ 10 ಎಕರೆ ಭೂಮಿ ಲಭ್ಯವಾಗದಿದ್ದರೆ, ಐದು ಎಕರೆ ಭೂಮಿಯನ್ನು ಖರೀದಿಸಿ ಬಹುಮಹಡಿ ಕಟ್ಟಡಗಳನ್ನು ನಿರ್ಮಿಸಿ, ವಿದ್ಯಾರ್ಥಿ ಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು. ಮುಂದಿನ ನಾಲ್ಕು ವರ್ಷಗಳೊಳಗಾಗಿ ರಾಜ್ಯದ ಎಲ್ಲ ಹೋಬಳಿಗಳಲ್ಲೂ ವಸತಿ ಶಾಲೆಗಳು ಸ್ವಂತ ಕಟ್ಟಡದಲ್ಲಿ ಕಾರ್ಯ ನಿರ್ವಹಿಸಲಿವೆ ಎಂದು ಆಂಜನೇಯ ತಿಳಿಸಿದರು.
ವಸತಿ ಶಾಲೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವು ಶಿಕ್ಷಕರು ತಮ್ಮನ್ನು ಖಾಯಂಗೊಳಿಸುವಂತೆ ಆಗ್ರಹಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಚರ್ಚಿಸಲು ಮುಂದಿನ 15 ದಿನಗಳೊಳಗೆ ಶಾಸಕರು, ಶಿಕ್ಷಕರ ಸಂಘದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಅವರು ಹೇಳಿದರು.
ರಾಜ್ಯದಲ್ಲಿ ಒಟ್ಟು 545 ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಮತ್ತು ಪದವಿ ಪೂರ್ವ ವಸತಿ ಕಾಲೇಜುಗಳಿವೆ. ಈ ಪೈಕಿ 284 ಸ್ವಂತ ಕಟ್ಟಡದಲ್ಲಿರುವ ವಸತಿ ಶಾಲೆಗಳು, 117 ವಸತಿ ಶಾಲೆಗಳ ಕಾಮಗಾರಿಗಳು ಪ್ರಗತಿಯಲ್ಲಿವೆ, 64 ಶಾಲೆಗಳಿಗೆ ಟೆಂಡರ್ ಮತ್ತು ಅಂದಾಜು ಪಟ್ಟಿ ತಯಾರಿಸಲಾಗುತ್ತಿದೆ. 80 ವಸತಿ ಶಾಲೆಗಳಿಗೆ ನಿವೇಶನ ಲಭ್ಯವಿಲ್ಲ ಎಂದು ಆಂಜನೇಯ ಮಾಹಿತಿ ನೀಡಿದರು.

Advertisement

0 comments:

Post a Comment

 
Top